ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಸಂಪಾದಕರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದರು.ಬೆಂಗಳೂರು ನಗರ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ನಡೆದ ನಗರ ಚಲನಾಶೀಲತೆ, ಸವಾಲುಗಳು ಮತ್ತು ಪೊಲೀಸರ ಪಾತ್ರ ವಿಷಯದ ಮೇಲೆ ಪೊಲೀಸರು ಸಂಪಾದಕರ ಜತೆಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪರಸ್ಪರ ವಿಷಯಗಳನ್ನು ವಿನಿಯಮ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪರಮೇಶ್ವರ್, ನಗರದಲ್ಲಿ ಸಂಚಾರ ಸುಧಾರಣೆಗೆ ಜನರು ಸಹಕಾರ ನೀಡಬೇಕು. ಆಗ ಮಾತ್ರ ಸಂಚಾರಿ ಪೊಲೀಸರ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.ಮಾ.3ರಂದು ರಾಜ್ಯ ಬಜೆಟ್ ಮಂಡನೆ ಯಾಗಲಿದ್ದು, ಸುಧಾರಣಾ ಕ್ರಮಕ್ಕೆ ಹೆಚ್ಚಿನ ಅನುದಾನ ಬೇಕಿದೆ. ಈ ಬಾರಿ ಬಜೆಟ್ನಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚಿನ ಅನುದಾನ ಮೀಸಲಿಡಲು ಕೋರಲಾಗುವುದು. ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡುಬಂದಿದೆ. ಕಳೆದ ವರ್ಷ 55ಲಕ್ಷ ವಾಹನಗಳ ಮಾಲೀಕರು ಚಾಲಕರಿಂದ 89 ಕೋಟಿ ರೂಪಾಯಿ ದಂಡ ಸಂಗ್ರಹಿಸಲಾಗಿದೆ.
ಸಂಚಾರ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಕುವ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.ಇದೇ ವೇಳೆ ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ ಮತ್ತು ಅನುಭವ ಕೇಂದ್ರವನ್ನು ಸಚಿವರು ಉದ್ಘಾಟಿಸಿದರು.ಸಂವಾದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರದ ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂವಾದದಲ್ಲಿ ಪಾಲ್ಗೊಂಡಿದ್ದ ಸಂಪಾದಕರಿಗೆ ನೆನಪಿಕೆ ಕಾಣಿಕೆ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಇಂದುಸಂಜೆ ಪತ್ರಿಕೆ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ. ಪದ್ಮನಾಗರಾಜ್ ಅವರಿಗೆ ನೆನಪಿನ ಕಾಣಿಕೆ ನೀಡಿ ಸಚಿವರು ಸಮಾರಂಭದಲ್ಲಿ ಪಾಲ್ಗೊಂಡಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.