ಬೆಂಗಳೂರು: ಕೇಂದ್ರದ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ವಿರುದ್ಧ ವರ್ಣ ನಿಂದನೆ ಮಾಡಿರುವ ಸಚಿವ ಬಿಝಡ್ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಜೆಡಿಎಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜೆಡಿಎಸ್ ಪಕ್ಷದ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ ನಡೆಸಿ, ಜಮೀರ್ ವಿರುದ್ಧ ಘೋಷಣೆ ಕೂಗಿ, ಜಮೀರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು, ಅಲ್ಲದೆ, ಬೆಂಗಳೂರಿನಲ್ಲಿರುವ ಜಮೀರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧನಕ್ಕೊಳಪಡಿಸಿದರು.
ಜೆಡಿಎಸ್ ಬೆಂಗಳೂರು ಘಟಕದ ಅಧ್ಯಕ್ಷ ರಮೇಶ್ ಗೌಡ ಮಾತನಾಡಿ, ಕುಮಾರಸ್ವಾಮಿ ವಿರುದ್ಧ ಅಸಂಸದೀಯ ಭಾಷೆಯ ಬಳಕೆ ಸ್ವೀಕಾರಾರ್ಹವಲ್ಲ. ಈ ಹೇಳಿಕೆ ಜಮೀರ್ನ ಕೆಟ್ಟ ಮನಸ್ಥಿತಿಯನ್ನು ಬಹಿರಂಗಪಡಿಸುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಜಮೀರ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಿದೆ ಎಂದು ಹೇಳಿದರು.
ಜಮೀರ್ ಹೇಳಿಕೆ ನಾಚಿಕೆಗೇಡಿನ ಸಂಗತಿಯಾಗಿದ್ದು, ಅವರ ಹೇಳಿಕೆಗಳಿಂದ ಒಕ್ಕಲಿಗ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಜಮೀರ್ ಇಂತಹ ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಇದೇ ಮೊದಲೇನಲ್ಲ. ಸಾಕಷ್ಟು ಬಾರಿ ನೀಡಿದ್ದಾರೆ. ಇದೇ ರೀತಿ ಹೇಳಿಕೆ ನೀಡುವುದನ್ನು ಮುಂದುವರಿಸಿದರೆ ರಾಜ್ಯದ ಜನತೆ ಸಹಿಸುವುದಿಲ್ಲ. ಅವರನ್ನು ಸಂಪುಟದಿಂದ ಕೈಬಿಡದಿದ್ದರೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುತ್ತೇವೆಂದು ಇದೇ ವೇಳೆ ಎಚ್ಚರಿಸಿದರು.