ಬೆಂಗಳೂರು: ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು, ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು ಹಾಗೂ ರಾಜ್ಯ ಸರಕಾರವೂ ೨೪ಘಿ೭ ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದಿದ್ದಾರೆ.