ಹುಬ್ಬಳ್ಳಿ: ಮಾಜಿ ಸಚಿವ, ಎಂಎಲ್ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಇನ್ನು ಕೆಲವರು ಇಲ್ಲ ಎನ್ನುತ್ತಿದ್ದಾರೆ. ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ. ಸಭಾಪತಿ ತಮ್ಮ ಕೆಲಸ ಮಾಡಿದ್ದಾರೆ ಪೊಲೀಸರು ತನಿಖೆ ಮಾಡಬೇಕು ಎಂದರು.
ಹಳೆ ಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆದ ವಿಚಾರವಾಗಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿ ತರಸಿಕೊಳ್ಳುತ್ತೇನೆ. ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದ್ದೇವೆ. ಗಾಂಧೀಜಿ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷರಾಗಿ ನೂರು ವರ್ಷ ಕಳೆದಿದೆ. ಕಾರ್ಯಕ್ರಮದಲ್ಲಿ ಇಡೀ ಕಾಂಗ್ರೆಸ್ ಸಮುದಾಯ ಭಾಗಿಯಾಗಲಿದೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭಾಗಿಯಾಗಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದ ಹೇಳಿದರು.