ಬೆಂಗಳೂರು: ನಗರದ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಅಪರಿಚಿತರು ಮೂರು ಹಸುಗಳ ಕೆಚ್ಚಲು ಕತ್ತರಿಸಿರುವ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಹಸುಗಳು ಸ್ಥಳೀಯರಾದ ಕರ್ಣ ಎಂಬುವವರಿಗೆ ಸೇರಿವೆ. ಜಾನುವಾರುಗಳ ಘೋರ ಶಬ್ದದಿಂದ ಎಚ್ಚರಗೊಂಡ ನಿವಾಸಿಗಳು, ಹಸುಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.
ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ. ಯಾರೇ ಕೃತ್ಯ ಎಸಗಿದ್ದರು ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಬಳ್ಳಾರಿಯಲ್ಲಿ ಸಿಎಂ ಸುದ್ದಿಗಾರರಿಗೆ ತಿಳಿಸಿದರು.
ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಅವರು ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು.
ಜಾತಿಗಣತಿ ವರದಿಗಳ ಪರ ಮತ್ತು ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂ. ವೆಚ್ಚದಲ್ಲಿ ಜಾತಿಗಣತಿ ವರದಿಯನ್ನು ಸಿದ್ಧಪಡಿಸಲಾಗಿದೆ. ಆ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ, ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದಲ್ಲಿ ‘ಕಪ್ಪು ಸಂಕ್ರಾಂತಿ’ ಆಚರಿಸುವುದಾಗಿ ಘೋಷಿಸಿದೆ.
‘ಈ ಹೇಯ ಕೃತ್ಯವು ಜಿಹಾದಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾದರೆ ನಾವು ‘ಕಪ್ಪು ಸಂಕ್ರಾಂತಿ’ ಆಚರಿಸುತ್ತೇವೆ. ಈ ಘಟನೆಯ ನಂತರ ನಾವು ಸಂಕ್ರಾಂತಿಯನ್ನು ಹೇಗೆ ಆಚರಿಸಬಹುದು?’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಸುದ್ದಿಗಾರರಿಗೆ ತಿಳಿಸಿದರು.
ಬಿಜೆಪಿ ಮುಖಂಡರು ಪಕ್ಷದ ಕಾರ್ಯಕರ್ತರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಹಸುಗಳ ಮಾಲೀಕರಿಗೆ ಸಾಂತ್ವನ ಹೇಳಿದ್ದಾರೆ.
ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಸಿಎನ್ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ನಾಯಕರು ಘಟನೆಯನ್ನು ಖಂಡಿಸಿದ್ದಾರೆ.