ಬೆಂಗಳೂರು: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಡೆಯನ್ನು ಪ್ರಶ್ನಿಸಿ ಸಿಎಂಸಿದ್ದರಾಮಯ್ಯ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.ರಾಜ್ಯಪಾಲರ ಅನುಮತಿ ರದ್ದುಪಡಿಸಬೇಕೆಂದು ಅವರು ಅರ್ಜಿಯಲ್ಲಿ ಕೋರಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದು ಕೊಂಡಿದ್ದಾರೆ. ಸಂವಿಧಾನ 163ನೇ ವಿಧಿಯಂತೆ ಸಂಪುಟದ ಶಿಫಾರಸು ಪಾಲಿಸಬೇಕು. ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ. ಹೀಗಾಗಿ ಇಂದೇ ತುರ್ತು ವಿಚಾರಣೆ ನಡೆಸಬೇಕು ಎಂದು ಸಿಎಂ ಪರ ವಕೀಲ ರವಿವರ್ಮ ಕುಮಾರ್ ಮನವಿ ಮಾಡಿದ್ದಾರೆ.
ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶ ಪ್ರಶ್ನಿಸಲಾಗಿದೆ. ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಅವರು ವಾದ ಮಂಡನೆ ಮಾಡಿದ್ದಾರೆ. ಜತೆಗೆ, ಕೇವಿಯಟ್ ಸಲ್ಲಿಸಿದವರಿಗೆ ಮಾಹಿತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿಗೂ ಅರ್ಜಿಯ ಪ್ರತಿ ಸಲ್ಲಿಸಲಾಗಿದೆ ಎಂದೂ ತಿಳಿಸಿದ್ದಾರೆ. ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರ ಮುಂದೆ ಮೆಮೊ ಸಲ್ಲಿಸಿದ್ದು, ಹಿರಿಯ ವಕೀಲ ರವಿವರ್ಮಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ವಾದ ಮಂಡಿಸಲಿದ್ದಾರೆ.
ಸಿದ್ದರಾಮಯ್ಯ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಪಡಿಸಲು ಸೂಚಿಸಿದೆ.ಈ ಮಧ್ಯೆ, ಸಿಎಂ ಸಿದ್ದರಾಮಯ್ಯ ಪರ ವಾದ ಮಂಡಿಸಲು ಹಿರಿಯ ವಕೀಲರಾದ ಅಭಿಷೇಕ್ ಸಿಂಘ್ವಿ ಮತ್ತು ಕಪಿಲ್ ಸಿಬಲ್ ಮತ್ತು ಪ್ರಶಾಂತ್ ಭೂಷಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ಹೇಳಲಾಗಿದೆ.
ಮತ್ತೊಂದೆಡೆ, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ರಾಜ್ಯದಾದ್ಯಂತ ಸಿಎಂ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು, ಮಂಗಳೂರು, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ.