ಬೆಂಗಳೂರು: ರಾಜ್ಯದಲ್ಲಿ ಎರಡು ಕಡೆ ನಡೆದ ಅಪಘಾತದಲ್ಲಿ 14 ಮಂದಿ ಮೃತಪಟ್ಟು ಹಲವು ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರಿನ ಸಿಂದನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಕ್ರೂಸರ್ ವಾಹನದ ಟೈರ್ ಸ್ಫೋಟಗೊಂಡು 4 ಮಂದಿ ಮೃತಪಟ್ಟಿದ್ದಾರೆ.ಮೃತ ನಾಲ್ವರ ಪೈಕಿ ಮಂತ್ರಾಲಯದ ಸಂಸ್ಕøತ ವಿದ್ಯಾ ಶಾಲೆಯ ಮೂವರು ವಿದ್ಯಾರ್ಥಿಗಳು ಹಾಗೂ ಕ್ರೂಸರ್ ವಾಹನ ಚಾಲಕ ಸೇರಿದ್ದಾರೆ.
ಹತ್ತು ಮಂದಿ ಘಟನೆಯಲ್ಲಿ ಗಾಯಗೊಂಡಿದ್ದು, ರಾತ್ರಿ 11 ಸುಮಾರಿಗೆ ಈ ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿ ಗಾಯಾಳುಗಳು ಹಂಪಿ ಬಳಿಯ ನರಹರಿ ಆರಾಧನ ಮಹೋತ್ಸವಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.ಮತ್ತೊಂದು ಪ್ರಕರಣದಲ್ಲಿ ಲಾರಿಯೊಂದು ಘಟ್ಟ ಪ್ರದೇಶದಲ್ಲಿ ಪಲ್ಟಿಯಾದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಸಂಭವಿಸಿದೆ.
ಲಾರಿ ಪಲ್ಟಿಯಾಗುತ್ತಿದ್ದಂತೆ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಮೃತರು ಹಾಗೂ ಗಾಯಾಳುಗಳು ಹಾವೇರಿಜಿಲ್ಲೆಯ ಸವಣೂರಿನಿಂದ ಲಾರಿಯಲ್ಲಿ ತರಕಾರಿ ತುಂಬಿಕೊಂಡು ಉತ್ತರಕನ್ನಡ ಜಿಲ್ಲೆ ಕುಮಟ ಸಂತೆಗೆ ಬರುವವ ವೇಳೆ ದುರ್ಘಟನೆ ನಡೆದಿದೆ.
ಮೃತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು ಎಂದು ಮುಖ್ಯಮಂತ್ರಿಯವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದು, ಮೃತ ಆತ್ಮಗಳಿಗೆ ಚಿರಶಾಂತಿ ಕೋರಿ, ದುರ್ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದವರಿಗೆ ಸಾಂತ್ವನ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಸಂಭವಿಸಿದ ಅಪಘಾತದಲ್ಲಿ ಮಡಿದವರ ಸುದ್ದಿಕೇಳಿ ಮನಸಿಗೆ ನೋವುಂಟು ಆಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದಿದ್ದಾರೆ.ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಂ ಹೆಬ್ಬಾರ್ ಅವರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಗಾಳುಗಳನ್ನು ಯಲ್ಲಾಪುರ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿ ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.