ಶ್ರೀನಗರ: ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ರಾಮನಗರದಿಂದ ಉಧಂಪುರಕ್ಕೆ ಹೋಗುತ್ತಿದ್ದ ಬಸ್, ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ದುರಂತ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಸೇನೆ, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಅಲ್ಲದೇ ಗಂಭೀರವಾಗಿ ಗಾಯಗೊಂಡವರನ್ನು ವಿಮಾನದಲ್ಲಿ ಸಾಗಿಸುವ ವ್ಯವಸ್ಥೆ ಸೇರಿದಂತೆ ಎಲ್ಲಾ ಸಂಭಾವ್ಯ ಸಹಾಯವನ್ನು ಒದಗಿಸುವ ಭರವಸೆ ನೀಡಿದ್ದಾರೆ.



