ಬೆಂಗಳೂರು: ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಎಕ್ಸ್ಪ್ರೆಸ್ ರೈಲುಗಳಿಗೆ ನಿಲುಗಡೆ ಕಲ್ಪಿಸುವ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ನಾಲ್ಕು ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಇದುವರೆಗೆ ನಾಯಂಡಹಳ್ಳಿ ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲುಗಳು ಮಾತ್ರ ನಿಲ್ಲುತ್ತಿದ್ದು, ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗಾಗಿ ಪ್ರಯಾಣಿಕರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಇಂದು ಆ ಬೇಡಿಕೆ ಈಡೇರಿದ ಹಿನ್ನೆಲೆ ಪ್ರಯಾಣಿಕರಲ್ಲಿ ಸಂತಸ ಮೂಡಿದೆ. ಜತೆಗೆ, ಮೈಸೂರು-ಬಾಗಲಕೋಟೆ ಬಸವ ಎಕ್ಸ್ಪ್ರೆಸ್ ರೈಲಿಗೆ ಸಚಿವರು ಸಾಂಕೇತಿಕವಾಗಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಈ ದಿನ ತಮಗೆ ಅತ್ಯಂತ ಸಂತೋಷ ತಂದಿದೆ ಎಂದು ಹೇಳಿದರು. ಈ ಯೋಜನೆಗೆ ಸಹಕಾರ ನೀಡಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಸಲ್ಲಿಸಿದರು. ಒಟ್ಟು ನಾಲ್ಕು ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.
ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಮೇಲೆ ಇರುವ ಒತ್ತಡವನ್ನು ಕಡಿಮೆ ಮಾಡಲು ಈ ಕ್ರಮ ಸಹಕಾರಿಯಾಗಲಿದೆ ಎಂದು ಹೇಳಿದರು. ನಿಲುಗಡೆ ಸಮಯದ ಮಾಹಿತಿಯನ್ನು ಶೀಘ್ರವೇ ಪ್ರಕಟಿಸಲು ಸೂಚನೆ ನೀಡಿರುವುದಾಗಿ ತಿಳಿಸಿದರು.
ರಾಜ್ಯದ ರೈಲ್ವೆ ಅಭಿವೃದ್ಧಿ ಕುರಿತು ಮಾತನಾಡಿದ ಸೋಮಣ್ಣ, ಹಿಂದಿನ ಸರ್ಕಾರದ ಅವಧಿಯಲ್ಲಿ ಸುಮಾರು ೮೦೦ ಕೋಟಿ ರೂ. ಮಾತ್ರ ಅನುದಾನ ನೀಡಲಾಗುತ್ತಿತ್ತು. ಈಗ ಕೇಂದ್ರ ಸರ್ಕಾರದಿಂದ ೭,೭೪೮ ಕೋಟಿ ರೂ. ಅನುದಾನ ದೊರಕಿದೆ ಎಂದು ಹೇಳಿದರು. ರಾಜ್ಯದಲ್ಲಿ ೫೨,೦೦೦ ಕೋಟಿ ರೂ. ಮೌಲ್ಯದ ವಿವಿಧ ರೈಲ್ವೆ ಯೋಜನೆಗಳು ನಡೆಯುತ್ತಿವೆ. ೭೦೭ ಮೇಲ್ಸೇತುವೆಗಳು ನಿರ್ಮಾಣಗೊಂಡಿದ್ದು, ೧೨ ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ ಎಂದು ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗಳಿಗೆ ತೀವ್ರ ಟೀಕೆ ವ್ಯಕ್ತಪಡಿಸಿದ ಸೋಮಣ್ಣ, ಅವರು ತಲೆ ಬುಡ ಇಲ್ಲದ ರೀತಿ ಮಾತನಾಡುತ್ತಾರೆ ಎಂದರು.
೪ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಸೋಮಣ್ಣ ಹಸಿರು ನಿಶಾನೆ



