This is the title of the web page
This is the title of the web page

91 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ: ಎಂ.ಬಿ.ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ 91 ಯೋಜನೆಗಳ ಒಟ್ಟು 7,660 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ.

ಇಲ್ಲಿನ ಕರ್ನಾಟಕ ಉದ್ಯೋಗಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಹಾಗೂ ಮೂಲಸೌಲಭ್ಯ ಅಭಿವೃದ್ಧಿ, ಸಚಿವರಾದ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಯ 140ನೇ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಯಿತು.

ಈ ಯೋಜನೆಗಳಿಂದ ಸುಮಾರು 18,146 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆಯೆಂದು ಸಚಿವ ಎಂ. ಬಿ. ಪಾಟೀಲ ಅವರಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಬಂಡವಾಳ ಹೂಡಿಕೆಯ 25 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ 5,750.73 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13,742 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಸಚಿವರು ಹೇಳಿದರು.

ರೂ. 15 ಕೋಟಿಯಿಂದ ರೂ 50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 57 ಹೊಸ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ 1,145 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 4,404 ಜನರಿಗೆ ಉದ್ಯೋಗ ಲಭ್ಯವಾಗಲಿದೆ. ಇದಲ್ಲದೇ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ 763.85 ಕೋಟಿ ಬಂಡವಾಳ ಹೂಡಿಕೆಯಾಗಲಿದೆ.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ  ಗುಂಜನ್ ಕೃಷ್ಣ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಕೆ.ಐ.ಎ.ಡಿ.ಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ . ಎಂ. ಮಹೇಶ್, ಐಟಿಬಿಟಿ ಇಲಾಖೆಯ ನಿರ್ದೇಶಕ ಎಚ್. ವಿ. ದರ್ಶನ್ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.