ಬೆಂಗಳೂರು: ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಮಟ್ಟದಲ್ಲಿ ಸಾಗಬೇಕು. ಹಾಗಾಗಿ ಶಿಕ್ಷಕರು ಹಾಗೂ ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಎಂದು ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು.
ಕೃಷ್ಣಾನಂದನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ರಾಜಸ್ತಾನ್ ಕಾಸ್ ಮೋ ಫೌಂಡೇಷನ್ ವತಿಯಿಂದ ನಡೆದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಣಕ್ಕೆ ಬಹಳ ಮಹತ್ವ ಇದೆ. ಮಕ್ಕಳು ಶಾಲೆಯ ಹಂತದಲ್ಲಿ ತಮ್ಮ ಮುಂದಿನ ಗುರಿಯನ್ನು ಇಟ್ಟುಕೊಂಡು ಅದಕ್ಕೆ ತಕ್ಕಂತೆ ಪರಿಶ್ರಮದಿಂದ ಅಧ್ಯಯನ ನಡೆಸಿ ತಮ್ಮ ಗುರಿಯನ್ನು ತಲುಪಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ, ಆರೋಗ್ಯಯುತವಾದಂತಹ ಜೀವನ ನಡೆಸಲು ನಮ್ಮ ಕ್ಲಿನಿಕ್ ಅನ್ನು ಸ್ಥಾಪಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವಂತಹ ಕೆಲಸವನ್ನು ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದರು.
ಇದೇ ವೇಳೆ ಶಾಲೆಯ 2600 ವಿಧ್ಯಾರ್ಥಿಗಳಿಗೆ ಉಚಿತ ಸಮವಸ್ತ್ರವನ್ನು ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಮಹದೇವು, ಚಿಕ್ಕೆಗೌಡ, ಡಾ.ನಾಗೇಂದ್ರ, ಸಾಗರ್, ಶಾಲೆಯ ಶಿಕ್ಷಕ ಶಿಕ್ಷಕಿಯರು ಹಾಗೂ ಪೋಷಕರು ಉಪಸ್ಥಿತರಿದ್ದರು.