ಬೆಂಗಳೂರು: ಜನಪರ ಕಾಳಜಿಯಿಂದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರು,
ಮಧ್ಯಮ ವರ್ಗದವರು, ಕೂಲಿ ಕಾರ್ಮಿಕರ ಸಂಕಷ್ಟಗಳನ್ನು ನಿವಾರಣೆ ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಲೋಕಸಭಾಸದಸ್ಯ ಡಿ.ಕೆ. ಸುರೇಶ್ ಹೇಳಿದರು.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಬಿಬಿಎಂಪಿ ಲಗ್ಗೆರೆ ವಾರ್ಡ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗಾಗಿ ಆಯೋಜಿಸಿದ್ದ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳೆಯರನ್ನು ಕೇವಲ ನಾಲ್ಕು ಗೋಡೆ ಒಳಗೆ ಸೀಮಿತಗೊಳಿಸದೆ ಅವರಿಗೆ ಉತ್ತಮ ಅವಕಾಶ ಹಾಗೂ ವೇದಿಕೆಯನ್ನು ಕಲ್ಪಿಸುವ ಮೂಲಕ ಅವರ ಕ್ಷೇಮಾಭಿವೃದ್ಧಿಗಾಗಿ ಶ್ರಮಿಸಬೇಕೆಂದು ಕರೆ ನೀಡಿದರು.
ವಿರೋಧ ಪಕ್ಷದವರು ನೀರಿಲ್ಲ ನೀರಿಲ್ಲ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ, ಮುಂದಿನ ಮೂರು ನಾಲ್ಕು ತಿಂಗಳ ಒಳಗಾಗಿ ಕ್ಷೇತ್ರ ವ್ಯಾಪ್ತಿಯ ಜನತೆಗೆ ಪ್ರತಿನಿತ್ಯ ಕಾವೇರಿ ಕುಡಿಯುವ ನೀರು ಸರಬರಾಜು ಮಾಡಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಬಿಬಿಎಂಪಿ ಹಾಗೂ ಜಲ ಮಂಡಳಿ ಸಮನ್ವತೆಯಿಂದ ಕಾರ್ಯನಿರ್ವಹಿಸಿ ನಾಗರಿಕರು ಎದುರಿಸುತ್ತಿರುವ ನೀರಿನ ಸಮಸ್ಯೆ ಪರಿಹಾರಕ್ಕೆ ಮುಂದಾಗಲಿದ್ದಾರೆ ಎಂದು ತಿಳಿಸಿದರು.
ಕೆಪಿಸಿಸಿ ವಕ್ತಾರೆ ಕುಸುಮಾ ಹನುಮಂತಪ್ಪ ಮಾತನಾಡಿ ಮಹಿಳೆಯರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಅನಾವರಣ ಗೊಳಿಸಲು ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಅವರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಿ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲಲು ಎಲ್ಲ ರೀತಿಯ ಸಹಕಾರ ಮತ್ತು ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಬಿಬಿಎಂಪಿ ಮಾಜಿ ಸದಸ್ಯರಾದ ಮಂಜುಳಾ ನಾರಾಯಣಸ್ವಾಮಿ ಮಾತನಾಡಿ ಮಹಿಳೆಯರ ತ್ಯಾಗ, ಪರಿಶ್ರಮ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಕ್ಷೇತ್ರಗಳಲ್ಲಿನ ಅವರ ಸಾಧನೆ, ಸಮಾಜಕ್ಕೆ ಅವರ ಅಗತ್ಯತೆ, ಕೊಡುಗೆ, ಅವರಿಗೆ ಗೌರವ ಸಲ್ಲಿಸಲು ಹೀಗೆ ಹತ್ತಾರು ಕಾರಣಕ್ಕೆ ಮಹಿಳೆಯರಿಗಾಗಿ ಮೀಸಲಿಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಪಶ್ಚಿಮ ವಿಭಾಗದ ಅಧ್ಯಕ್ಷ ಹನುಮಂತ ರಾಯಪ್ಪ ಬಿಬಿಎಂಪಿ ಮಾಜಿ ಸದಸ್ಯರಾದ ಮಂಜುಳಾ ನಾರಾಯಣಸ್ವಾಮಿ, ವೇಲು ನಾಯ್ಕರ್, ಸಿದ್ದೇಗೌಡ,ಕಾಂಗ್ರೆಸ್ ಮುಖಂಡರಾದ ಹನುಮೇಗೌಡ, ಲಕ್ಷ್ಮಿ, ಮೀನಾ ಕುಮಾರಿ, ಕಾಂಚನ, ಗಾಯಿತ್ರಿ ಮತ್ತಿತರರು ಉಪಸ್ಥಿತರಿದ್ದರು.