ಬೆಂಗಳೂರು: ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಭ್ರಷ್ಟಾಚಾರ ಮುಕ್ತ ಆಡಳಿತ ಕೊಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ಮಾತಿಗೆ ತಪ್ಪಿದೆ. ಕಾಂಗ್ರೆಸ್ ಶಾಸಕರೊಬ್ಬರು ಭ್ರಷ್ಟಾಚಾರದಲ್ಲಿ ತೊಡಗಿರುವುದು ಸಾಬೀತಾಗಿದೆ ಎಂದು ದೂರಿದ್ದಾರೆ.
ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರು ಕೋಚಿಮುಲ್ ನೇಮಕಾತಿಯಲ್ಲಿ ನೇರವಾಗಿ ಅಕ್ರಮದಲ್ಲಿ ತೊಡಗಿರುವ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರವು ಶಾಸಕನ ರಕ್ಷಣೆಗೆ ಧಾವಿಸದೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಿದೆ. ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಮತ್ತು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಈ ವಿಚಾರದಲ್ಲಿ ಅಗತ್ಯ ತನಿಖೆಯಾಗಿ ಸತ್ಯಾಂಶ ಹೊರಬರಬೇಕಿದೆ ಎಂದು ಆಗ್ರಹಿಸಿದರು.
ಇ.ಡಿ ಅಧಿಕಾರಿಗಳೇ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರು ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಹೇಳಿದ್ದು, ಸರ್ಕಾರ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು. ಅವ್ಯವಹಾರದಲ್ಲಿ ಭಾಗಿಯಾಗಿರುವ ಶಾಸಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಎಎಪಿ ಈ ವಿಚಾರವಾಗಿ ಹೋರಾಟ ನಡೆಸಲಿದೆ. ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ಸರ್ಕಾರ ನೀಡಬೇಕಿದೆ. ಭ್ರಷ್ಟಾಚಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಗದೀಶ್ ವಿ ಸದಂ ಒತ್ತಾಯಿಸಿದರು.
ಕೋಚಿಮುಲ್ ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರತಿ ಹುದ್ದೆಯು 20 ಲಕ್ಷದಿಂದ 30 ಲಕ್ಷ ರೂಪಾಯಿಗೆ ಮಾರಾಟವಾಗಿರುವುದು ಪತ್ತೆಯಾಗಿದೆ. ನೇಮಕಾತಿ ಸಮಿತಿಯು ಸಂದರ್ಶನ ಪ್ರಕ್ರಿಯೆಯನ್ನು ತಿರುಚಿರುವುದಷ್ಟೇ ಅಲ್ಲದೆ ಅಂತಿಮ ಪಟ್ಟಿಯನ್ನು ಸಾರ್ವಜನಿಕಗೊಳಿಸುವ ಮುನ್ನವೇ ತಮಗೆ ಬೇಕಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ತರಬೇತಿಗೆ ಕಳುಹಿಸಿದ್ದಾರೆ. ಇದನ್ನೆಲ್ಲಾ ಗಮನಿಸಿದರೆ ಇದರ ಹಿಂದೆ ಇನ್ನು ಯಾರೆಲ್ಲಾ ಇದ್ದಾರೆ ಎನ್ನುವ ಬಗ್ಗೆ ಗುಮಾನಿ ಮೂಡುತ್ತದೆ.
ಹೀಗಾಗಿ, ಈ ವಿಚಾರದಲ್ಲಿ ವಿಳಂಬ ಮಾಡದೆ ನಿಷ್ಪಕ್ಷಪಾತ ತನಿಖೆಗೆ ಆದ್ಯತೆ ನೀಡಬೇಕಿದೆ. ಸರ್ಕಾರವು ಯಾವುದೇ ಮುಲಾಜಿಲ್ಲದೆಯೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಾಮಾಣಿಕ ಉದ್ಯೋಗಾಂಕ್ಷಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ಅವರು ತಿಳಿಸಿದರು.