ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ `ಇಂಡಿಯಾ’ ಗೆದ್ದರೆ ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಗೆ ತಡೆಯೊಡ್ಡಲಾಗುವುದು ಎಂದು ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವುದನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ ಖಂಡಿಸಿದ್ದಾರೆ.
ಅಲ್ಲದೆ ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆ ಜಾರಿಗೊಳಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದವರು ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಡಿಎಂಕೆ ಚುನಾವಣಾ ಪ್ರಣಾಳಿಕೆ ವಿಚಾರವಾಗಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅಶೋಕ್, ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.
`ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು `ಇಂಡಿಯಾ’ ಮಿತ್ರಪಕ್ಷ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಈಗ `ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ’ ಎಂದು ಅಶೋಕ್ ಪ್ರಶ್ನೆ ಮಾಡಿದ್ದಾರೆ.
`ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ’ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.