ಬೇಲೂರು: ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಬೇಲೂರು, ಚಿಕ್ಕಮಗಳೂರು ರೈಲ್ವೆ ಯೋಜನೆ ಡಿಸೆಂಬರ್ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.ಬೇಲೂರು ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಮಲೆನಾಡು ಭಾಗದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ ನಿಯಂತ್ರಣ ಕುರಿತ ಸಭೆಯಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಸಚಿವರು, ವಿಶ್ವವಿಖ್ಯಾತ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ದೇವಾಲಯಕ್ಕೆ ಆಗಮಿಸಿದ ಸಚಿವರನ್ನು ದೇವಸ್ಥಾನದ ವತಿಯಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಬಳಿಕ ಶ್ರೀ ಚನ್ನಕೇಶವ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಸಚಿವರು, ದೇವಾಲಯಕ್ಕೆ ಸಂಬAಧಿಸಿದ ಪಾರ್ಕಿಂಗ್ ಸ್ಥಳ, ಫುಡ್ ಕೋರ್ಟ್ ನಿರ್ಮಾಣಕ್ಕೆ ನಿಗದಿಪಡಿಸಿರುವ ಜಾಗ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.ಈ ವೇಳೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ವಿಶ್ವವಿಖ್ಯಾತ ಪ್ರವಾಸಿ ತಾಣವಾದ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯಕ್ಕೆ ಪ್ರತಿನಿತ್ಯ ದೇಶ-ವಿದೇಶಗಳಿಂದ ಸಾವಿರಾರು ಭಕ್ತರು ಹಾಗೂ ಪ್ರವಾಸಿಗರು ಆಗಮಿಸುತ್ತಿದ್ದು, ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.ದೇವಾಲಯದ ಪಾರ್ಕಿಂಗ್ ವ್ಯವಸ್ಥೆ, ಫುಡ್ ಕೋರ್ಟ್ ನಿರ್ಮಾಣ ಹಾಗೂ ಪ್ರವಾಸಿಗರ ಸೌಲಭ್ಯಕ್ಕಾಗಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ನೀಲಿ ನಕ್ಷೆಯನ್ನು ಸಚಿವರು ಜಿಲ್ಲಾಧಿಕಾರಿ ಲತಾ ಕುಮಾರಿ ಹಾಗೂ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು. ಭಕ್ತರು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಶೌಚಾಲಯ, ವಸತಿ ಸೌಲಭ್ಯ, ಯಾತ್ರಾ ನಿವಾಸ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಶೀಘ್ರ ನಿರ್ಮಿಸಲು ಸೂಚನೆ ನೀಡಿದರು.ದೇವಾಲಯದ ಸುತ್ತಮುತ್ತ ಪಾರ್ಕಿಂಗ್ ವ್ಯವಸ್ಥೆ ಅಸ್ತವ್ಯಸ್ತಗೊಂಡಿರುವುದನ್ನು ಗಮನಿಸಿದ ಸಚಿವರು, ಈಗಾಗಲೇ ನಿಗದಿಪಡಿಸಿರುವ ಸ್ಥಳದಲ್ಲೇ ವಾಹನ ನಿಲುಗಡೆ ವ್ಯವಸ್ಥೆ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ವಾರಾಂತ್ಯ ಹಾಗೂ ರಜೆ ದಿನಗಳಲ್ಲಿ ಶಾಲಾ ಪ್ರವಾಸ ಮತ್ತು ಪ್ರವಾಸಿಗರ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ, ಬಸ್ ನಿಲ್ದಾಣದಿಂದ ದೇವಾಲಯದವರೆಗೆ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪರ್ಯಾಯ ಮಾರ್ಗ ರೂಪಿಸುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ, ದೇವಾಲಯ ಆಡಳಿತ ಮಂಡಳಿ ಹಾಗೂ ಪುರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಬೇಲೂರು?ಚಿಕ್ಕಮಗಳೂರು ರೈಲ್ವೆ ಯೋಜನೆ ಅಂತಿಮ ಹಂತ ತಲುಪಿದ್ದು, ಡಿಸೆಂಬರ್ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ಯೋಜನೆಗೆ ಸಂಬAಧಿಸಿದ ಭೂಸ್ವಾಧೀನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ರಾಜ್ಯ ಸರ್ಕಾರವು ಯೋಜನೆಗೆ ಶೇ.75ರಷ್ಟು ಅನುದಾನ ನೀಡುತ್ತಿದೆ. ಭೂಸ್ವಾಧೀನ ವೆಚ್ಚ ಸೇರಿದಂತೆ ಒಟ್ಟು ಸುಮಾರು 165 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರವೇ ಭರಿಸಿದೆ ಎಂದು ಹೇಳಿದರು.ರೈಲ್ವೆ ಕಾಮಗಾರಿಯ ಅನುಷ್ಠಾನವನ್ನು ರೈಲ್ವೆ ಇಲಾಖೆ ನೋಡಿಕೊಳ್ಳುತ್ತಿದ್ದು, ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಇದಾದ ಬಳಿಕ ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಜಲ ಜೀವನ್ ಮಿಷನ್ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಲಾಗುವುದು ಎಂದರು.ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನದ ಗೊಂದಲಗಳ ಕುರಿತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಸಮಸ್ಯೆ ಪರಿಹಾರಕ್ಕಾಗಿ ಅಧಿಕಾರಿಗಳ ಮಟ್ಟದಲ್ಲಿ ಸಭೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಅಂತಿಮ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.ಇದೇ ವೇಳೆ ಚಿಕ್ಕಮಗಳೂರು ಹಾಗೂ ಬೇಲೂರು?ಸಕಲೇಶಪುರ ಗಡಿಭಾಗದಲ್ಲಿ ಹೆಚ್ಚುತ್ತಿರುವ ಆನೆ?ಮಾನವ ಸಂಘರ್ಷದ ಹಿನ್ನೆಲೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆನೆ ಹಾವಳಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಇನ್ನೂ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ, ಈ ವರ್ಷದೊಳಗೆ ರಾಜ್ಯ ಸರ್ಕಾರವೇ ಪರ್ಯಾಯ ಯೋಜನೆ ರೂಪಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.ಕಾಫಿ ತೋಟದ ಮಾಲೀಕರು ಅರಣ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸಹಕಾರ ನೀಡಬೇಕು. ಆನೆಗಳ ಚಲನವಲನದ ಮಾಹಿತಿ ಮುಚ್ಚಿಡುವುದು ಅಥವಾ ಅರಣ್ಯ ಇಲಾಖೆ ಸಿಬ್ಬಂದಿಗೆ ತೋಟ ಪ್ರವೇಶ ನಿರಾಕರಿಸುವುದು ಗಂಭೀರ ಪರಿಣಾಮ ಉಂಟುಮಾಡಬಹುದು ಎಂದು ಸಚಿವರು ಎಚ್ಚರಿಸಿದರು.ಅರಣ್ಯ ಇಲಾಖೆಗೆ ಆನೆಗಳ ಚಲನವಲನವನ್ನು ನಿಖರವಾಗಿ ಪತ್ತೆಹಚ್ಚುವಂತೆ, ಸಾರ್ವಜ
ನಿಕರಿಗೆ ಸಾಮಾನ್ಯ ಎಚ್ಚರಿಕೆಯ ಬದಲು ನಿರ್ದಿಷ್ಟ ಪ್ರದೇಶದ ಮಾಹಿತಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜನರ ಜೀವ ರಕ್ಷಣೆ, ಬೆಳೆ ಹಾನಿ ತಡೆ ಹಾಗೂ ಆನೆ, ಮಾನವ ಸಂಘರ್ಷ ನಿಯಂತ್ರಣಕ್ಕಾಗಿ ಸಮಗ್ರ ಕಾರ್ಯತಂತ್ರ ರೂಪಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.ಈ ಸಂದರ್ಭದಲ್ಲಿ ಬೇಲೂರು ವಿಧಾನಸಭಾ
ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್, ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಲತಾ ಕುಮಾರಿ, ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಯೋಗೇಶ್, ಪುರಸಭೆ ಮುಖ್ಯಾಧಿಕಾರಿ ಬಸವರಾಜ್ ಶಿಗ್ಗಾವಿ, ಪುರಸಭೆ ಸದಸ್ಯ ಜಮಾಲದಿನ್, ಆರೋಗ್ಯಾಧಿಕಾರಿ ಲೋಹಿತ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಬೇಲೂರು, ಚಿಕ್ಕಮಗಳೂರು ರೈಲ್ವೆ ಯೋಜನೆ ಪೂರ್ಣ: ಸಚಿವ ಕೃಷ್ಣ ಬೈರೇಗೌಡ



