ಹೊಸಕೋಟೆ: ಗ್ರಾಮೀಣ ಪ್ರದೇಶದ ಜನರು ಶುದ್ಧ ಕುಡಿಯುವ ನೀರನ್ನು ಬಳಸುವುದರಿಂದ ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.
ಅವರು ತಾಲೂಕಿನ ದೊಡ್ಡಗಟ್ಟಿಗನಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆತ್ತನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಶಾಸಕರಿಗೆ ಮನವಿ ಮಾಡಿದ್ದ ಕಾರಣ ಕೂಡಲೇ ಸ್ಪಂದಿಸಿದ ಶಾಸಕರು ತಮ್ಮ ವೈಯಕ್ತಿಕ ಹಣದಿಂದ ಘಟಕವನ್ನು ಸ್ಥಾಪಿಸಿ ಅನುಕೂಲ ಕಲ್ಪಿಸಿಕೊಡಲಾಗಿದೆ.
ಇದೇ ರೀತಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬಮೂಲ್‍ನ ಸಹಯೋಗದಲ್ಲಿ, ಖಾಸಗಿ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿಯೂ ಸಹ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲೂ ಸಹ ಅಗತ್ಯವಾದ ಸವಲತ್ತುಗಳನ್ನು ಸಮರ್ಪಕವಾಗಿ ಒದಗಿಸಲಾಗುತ್ತಿದೆ. ಇಂತಹ ಸೌಲಭ್ಯವನ್ನು ಗ್ರಾಮಸ್ಥರು ಸದುಪಯೋಗಪಡಿಸಿಕೊಂಡು ನೈರ್ಮಲ್ಯ, ಸ್ವಚ್ಛತೆ ಕಾಪಾಡಿಕೊಳ್ಳಲು ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಉಚಿತವಾಗಿ 20 ಲೀಟರ್ ಸಾಮಥ್ರ್ಯದ ಕ್ಯಾನ್‍ಗಳನ್ನು ಸಹ ವಿತರಿಸಲಾಯಿತು.
ಕಸಬಾ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಮುಖಂಡರಾದ ಸುನೀಲ್, ನಾರಾಯಣಗೌಡ, ರೋಟರಿ ಸಂಸ್ಥೆಯ ಅಧ್ಯಕ್ಷ ಲಕ್ಷ್ಮಣಗೌಡ ಇನ್ನಿತರರು ಭಾಗವಹಿಸಿದ್ದರು.
Leave a Review