ತಿ.ನರಸೀಪುರ: ಬಾಬು ಜಗಜೀವನರಾಮ್ ಅವರು ಸೃಷ್ಟಿಸಿದ ಹಸಿರು ಕ್ರಾಂತಿಯಿಂದ ದೇಶದಲ್ಲಿ ಬಡವರಿಗೆ ಆಹಾರದ ಕೊರತೆ ದೂರವಾಯಿತು. ಹಸಿರು ಕ್ರಾಂತಿಯ ಹರಿಕಾರ ಬಾಬೂಜಿ ಸಮಾಜದ ಕಟ್ಟಕಡೆಯ ವ್ಯಕ್ತಿಯ ಜೀವನಕ್ಕೂ ಆದ್ಯತೆ ಕೊಟ್ಟಿದ್ದರಿಂದ ಇಂದು ಸಮಾಜದಲ್ಲಿ ಆಹಾರ ಪದಾರ್ಥಗಳ ಕೊರತೆಯಿಲ್ಲ ಎಂದು ತಾಲ್ಲೂಕು ದಂಡಾಧಿಕಾರಿ ಸುರೇಶಾಚಾರ್ ಸ್ಮರಿಸಿದರು.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲ್ಲೂಕು ಆಡಳಿತ,ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಬಾಬು ಜಗಜೀವನ್ ರಾಮ್ ಇವರ ಸಂಯುಕ್ತ ಆಶ್ರಯದಲ್ಲಿ ಸರಳವಾಗಿ ಹಮ್ಮಿಕೊಂಡಿದ್ದ ಬಾಬು ಜನಜೀವನ ರಾಮ್ ಮೋಹನ್ ಅವರ 117 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಧಿಕಾರ ಮತ್ತು ಆಸ್ತಿಯಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ ಹಾಗೂ ತ್ಯಾಗದಿಂದ ಗಳಿಸಬಹುದೆಂದು ಬಾಬು ಜಗಜೀವನ ರಾಮ್ರ ಬದುಕು ತಿಳಿಸಿ ಕೊಡುತ್ತದೆ ಎಂದು ಅಭಿಪ್ರಾಯ ಪಟ್ಟರು. ಬಾಬೂಜಿ ಎಂದೇ ಹೆಸರಾಗಿದ್ದ ಬಾಬು ಜಗಜೀವನ ರಾಮ್ ನಿಸ್ವಾರ್ಥ ಸೇವೆ, ಸ್ವಾತಂತ್ರ್ಯ ಚಳವಳಿ ಮತ್ತು ಸಮರ್ಪಣಾ ಮನೋಭಾವದ ಹೋರಾಟದಿಂದ ಸಮಾಜಕ್ಕೆ ಆದರ್ಶಪ್ರಾಯ ವ್ಯಕ್ತಿಯಾಗಿದ್ದಾರೆ.