ಬೆಳಗಾವಿ: ನಿನ್ನೆ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೂವರು ಬಿಜೆಪಿ ಶಾಸಕರು ಹಾಜರಾಗಿದ್ದು, ಕೂತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಕಾಂಗ್ರೆಸ್ ಶಾಸಕಾಂಗ ಸಭೆಗೆ ತೆರಳಿದ್ದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್. ಸಭೆಗೆ ಮುಖ ತೋರಿಸಿ ಊಟ ಮುಗಿಸಿಕೊಂಡು ಹೊರ ಬಂದಿದ್ದಾರೆ.
ಈ ಇಬ್ಬರು ವಿಧಾನಸಭಾ ಸದಸ್ಯರ ಜೊತೆಗೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸಹ ಹಾಜರಾಗಿದ್ದರು ಎಂದು ಹೇಳಲಾಗಿದೆ. ಈ ಮೂವರು ಶಾಸಕರು ಶಾಸಕಾಂಗ ಸಭೆಗೆ ಹಾಜರಾಗಿರಲಿಲ್ಲ. ಊಟಕ್ಕೆ ಆಹ್ವಾನ ನೀಡಿದ್ದಕ್ಕೆ ಬಂದಿದ್ದರು ಎಂದು ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್ ಸಹ ತಾವು ಸೋಮಶೇಖರ್ ಅವರೊಂದಿಗೆ ಮಾತನಾಡಿದ್ದು, ಅವರು ಸಹ ಭೋಜನಕ್ಕೆ ತೆರಳಿದ್ದಾಗಿ ತಿಳಿಸಿದ್ದಾರೆ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಶಾಸಕರ ಕ್ಷೇತ್ರಗಳಿಗೆ 25 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿಯವರು ಘೋಷಣೆ ಮಾಡಿರುವುದಕ್ಕೆ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ.
ಕಾಂಗ್ರೆಸ್ ಶಾಸಕರು ಒಕ್ಕೊರಲಿನಿಂದ ಮುಖ್ಯಮಂತ್ರಿಯವರನ್ನು ಅಭಿನಂದಿಸಿದ್ದು ಈ ಸಂದರ್ಭದಲ್ಲಿ ಮಾತನಾಡಿರುವ ಮುಖ್ಯಮಂತ್ರಿಯವರು ಲೋಕಸಭಾ ಚುನಾವಣೆಗೆ ಎಲ್ಲರೂ ಸಜ್ಜಾಗಿ ಎಂದು ಕರೆ ನೀಡಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳ ಬಗ್ಗೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಾವೇಶ ಮಾಡಿ, ಜನರಿಗೆ ಲೋಕಸಭೆಗೆ ಗ್ಯಾರಂಟಿಗಳ ಪ್ರಚಾರ ಹೆಚ್ಚೆಚ್ಚು ಮನವರಿಕೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ನಿನ್ನೆ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಕೆಲವು ಶಾಸಕರು ಗೈರಾಗಿರುವುದಕ್ಕೆ ಮುಖ್ಯಮಂತ್ರಿಯವರು ಸಿಟ್ಟಾದರು ಎಂದು ಹೇಳಲಾಗಿದೆ.ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ ಪಾಟೀಲ್, ಶರಣು ಪ್ರಕಾಶ್ ಪಾಟೀಲ್, ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ, ಶರಣಬಸಪ್ಪ ದರ್ಶನಾಪುರ್ ಸೇರಿದಂತೆ ಕೆಲವರು ಗೈರಾಗಿದ್ದರು ಎನ್ನಲಾಗಿದೆ.ಗೈರಾದವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು ಸಚಿವ ಸಂಪುಟ ಸಭೆಯಲ್ಲಿ ಅವರಿಗೆ ಎಚ್ಚರಿಕೆ ನೀಡುವುದಾಗಿ ಹೇಳಿದ್ದಾರೆ.