ಬೆಂಗಳೂರು: ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಸೈಕಲ್ ಜಾಥಾ ನಡೆಸಲು ಮುಂದಾದ ಬಿಜೆಪಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಿಂದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ವರೆಗೂ ಸೈಕಲ್ ಜಾಥಾ ನಡೆಸಲು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಂದಾದರು.
ಆದರೆ ಪೊಲೀಸರು ಪ್ರತಿಭಟನಾಕಾರರನ್ನು ಬಿಜೆಪಿ ಕಚೇರಿಯಿಂದ 500 ಮೀಟರ್ ದೂರದಲ್ಲಿಯೇ ತಡೆದು ವಶಕ್ಕೆ ಪಡೆದರು. ವಶಕ್ಕೆ ಪಡೆದ ಪ್ರತಿಭಟನಾಕಾರರನ್ನು ಮೂರು ಬಿಎಂಟಿಸಿ ಬಸ್ಗಳಲ್ಲಿ ಶೇಷಾದ್ರಿಪುರಂ ಪೊಲೀಸ್ ಠಾಣೆಗ ಕರೆದೊಯ್ಯಲಾಯಿತು.ಈ ಸಂದರ್ಭದಲ್ಲಿ ಪ್ರತಿಭಟನಾನಿರತರು ರಾಜ್ಯ ಸರ್ಕಾರದ ದೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಪೊಲೀಸರು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪೊಲೀಸರೊಂದಿಗೆ ರಾಜ್ಯ ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ವಾಗ್ವಾದ ನಡೆಸಿದರು.ಇದಕ್ಕೂ ಮುನ್ನ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಆಗ್ರಹಪಡಿಸಿದರು.
ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿನವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ಅವರು ಎಚ್ಚರಿಸಿದರು.
ಬಿಜೆಪಿ ಸರಕಾರದ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ವಿಮುಖರಾಗುವುದಿಲ್ಲ ಎಂದೂ ಅವರು ತಿಳಿಸಿದರು.
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಮೊದಲಾದ ಪ್ರಮುಖರು ಭಾಗವಹಿಸಿದ್ದರು. ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳೂ ಸೇರಿ ಈ ಜಾಥಾ ಏರ್ಪಡಿಸಿದ್ದವು. ಇಳಿಸಿ ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ ರಾಜ್ಯ ಸರಕಾರ ತೊಲಗಿಸಿ, ಬೇಕೇ ಬೇಕು ನ್ಯಾಯ ಬೇಕು, ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರಕ್ಕೆ ಧಿಕ್ಕಾರ, ಅಯ್ಯಯ್ಯೋ ಅನ್ಯಾಯ ಮೊದಲಾದ ಘೋಷಣೆಗಳನ್ನು ಕೂಗುತ್ತ ಸೈಕಲ್ ಜಾಥಾ ನಡೆಯಿತು.
ಬೆಂಗಳೂರಿನ ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
ಸೈಕಲ್ ಜಾಥಾ ಪ್ರತಿಭಟನೆ ಸ್ವಲ್ಪ ದೂರ ಸಾಗುತ್ತಿದ್ದಂತೆ ತಡೆದು ನಿಲ್ಲಿಸಿದ ಪೊಲೀಸರು ಸೈಕಲ್ ಜಾಥಾದಲ್ಲಿ ಭಾಗವಹಿಸಿದವರನ್ನು ಬಂಧಿಸಿದರು.
ಬಿಜೆಪಿ ವತಿಯಿಂದ ಇಂದು ರಾಜ್ಯದ ಎಲ್ಲಾ ತಾಲೂಕು ಸೇರಿದಂತೆ ವಿವಿಧೆಡೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.