ಬೆಂಗಳೂರು: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಅಧೀರ್ ಚೌದರಿ ಅವರ ತೀರ್ಮಾನ ಸರಿಯಾಗಿದೆ, ಇದನ್ನು ನಾನು ಬೆಂಬಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಾತಿ, ಧರ್ಮ, ಪಕ್ಷ-ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಶ್ರೀರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ. ಶ್ರದ್ದಾಪೂರ್ವಕವಾಗಿ ನಡೆಸಬೇಕಾಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿದ್ದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ.
ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್.ಎಸ್ ನಾಯಕರು ಅಪೂರ್ಣಗೊಂಡಿರುವ ಶ್ರೀರಾಮನ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರಮೋದಿ ಅವರ ನಡೆಯ ಬಗ್ಗೆ ಮೌನವಾಗಿರುವುದು ಇವರೆಲ್ಲರ ಪೆÇಳ್ಳು ಹಿಂದುತ್ವದ ಮುಖವಾಡವನ್ನು ಬಯಲುಗೊಳಿಸಿದೆ ಎಂದಿದ್ದಾರೆ.
ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ಪಕ್ಷ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂಬ ನಮ್ಮ ನಿಲುವಿನಂತೆ ರಾಮಮಂದಿರ ನಿರ್ಮಾಣಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡಿದ್ದೆವು. ಇದರ ಬಗ್ಗೆ ನಮ್ಮಲ್ಲಿ ಯಾವುದೇ ತಕರಾರಿಲ್ಲ. ಮುಸ್ಲಿಂ ಬಾಂಧವರು ಕೂಡಾ ನ್ಯಾಯಾಲಯದ ತೀರ್ಪನ್ನು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ.
ಆದರೆ ರಾಮಜನ್ಮಭೂಮಿ ವಿವಾದ ಧಾರ್ಮಿಕ ಶ್ರದ್ದೆಯ ಪ್ರಶ್ನೆ, ಅದು ನ್ಯಾಯಾಲಯದಲ್ಲಿ ತೀರ್ಮಾನ ಮಾಡುವಂತಹದ್ದಲ್ಲ ಎಂದು ಹೇಳಿಕೊಂಡು ಬಂದಿದ್ದ ಬಿಜೆಪಿ ಮತ್ತು ಆರ್.ಎಸ್.ಎಸ್,…ವಿಶ್ವಹಿಂದೂ ಪರಿಷತ್ ಮೊದಲಾದ ಸಂಘಟನೆಗಳು ಸುಪ್ರೀಂ ಕೋರ್ಟ್ ತೀರ್ಪು ತಮ್ಮ ಪರವಾಗಿ ಹೊರಬಿದ್ದ ಕೂಡಲೇ ಅದನ್ನು ಒಪ್ಪಿಕೊಂಡಿರುವುದು ಈ ಸಂಘಟನೆಗಳ ನಾಯಕರ ಹಿಪಾಕ್ರಟಿಕ್ ನಡವಳಿಕೆಗೆ ಸಾಕ್ಷಿ.
ರಾಮಮಂದಿರದಲ್ಲಿ ಶೈವರು-ಶಾಕ್ತರಿಗೆ ಅಧಿಕಾರ ಇಲ್ಲ ಎಂಬ ರಾಮಮಂದಿರ ಟ್ರಸ್ಟ್ನ ಕಾರ್ಯದರ್ಶಿಯವರ ಹೇಳಿಕೆ ವಿವಾದ ಸೃಷ್ಟಿಸಿದೆ. ಇದು ನಿಜವೆಂದಾದರೆ ಇದು ಸಮಸ್ತ ಶೈವ ಆರಾಧಕರಿಗೆ ಮಾಡಿರುವ ಅವಮಾನವಾಗಿದೆ. ಇದೇ ರೀತಿ ರಾಮಮಂದಿರವನ್ನು ರಾಜಕೀಯಕ್ಕಾಗಿ ದುರುಪಯೋಗಗೊಳಿಸುತ್ತಿರುವುದನ್ನು ವಿರೋಧಿಸಿ ನಾಲ್ವರು ಶಂಕರಾಚಾರ್ಯರು ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಹೇಳಿರುವುದು ವರದಿಯಾಗಿದೆ.
ಸಮಸ್ತ ಹಿಂದೂಗಳನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಬೇಕಾಗಿದ್ದ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮ ಬಿಜೆಪಿಯ ರಾಜಕೀಯದಿಂದಾಗಿ ಹಿಂದೂಗಳನ್ನು ಒಡೆಯುವ ಕಾರ್ಯಕ್ರಮವಾಗಿರುವುದು ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.