ಬೆಂಗಳೂರು: ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿಯವರು ಎರಡು ದಿನಗಳ ಕಾಲ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದರು.
ನಿನ್ನೆ ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ಮುಖಂಡರೊಂದಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ತಡರಾತ್ರಿವರೆಗೂ ಮಹತ್ವದ ಸಭೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನತ್ತ ಧಾವಿಸಿದ್ದಾರೆ. ಮುಖ್ಯಮಂತ್ರಿಗಳ ಜತೆ ನಿನ್ನೆ ಹಾಗೂ ಮೊನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹ ಹಾಜರಿದ್ದರು.