ದೆಹಲಿ: ನಮ್ಮ ಪಕ್ಷದಲ್ಲಿ ಅನಗತ್ಯವಾಗಿ ಗೊಂದಲ ಸೃಷ್ಟಿ ಎಬ್ಬಿಸಲು ಬಿಜೆಪಿಯವರು ಯತ್ನ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಪಕ್ಷದ ನಾಯಕರು ಯಾರನ್ನು ಬಿಜೆಪಿಯವರು ಅವರ ಪಕ್ಷಕ್ಕೆ ಸೇರಿಸಿಕೊಳ್ಳಲು ಸಾಧ್ಯವಿಲ್ಲ.
ಅವರ ಪಕ್ಷದ ನಾಯಕನನ್ನೇಅವರು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ನಮ್ಮ ಪಕ್ಷದ ಶಾಸಕರ್ಯಾರು ಬಿಜೆಪಿಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಬಿಜೆಪಿ ಅನಗತ್ಯವಾಗಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ತಿಂಗಳ 15ರೊಳಗಾಗಿ ರಾಜ್ಯದ ವಿವಿಧ ನಿಗಮ ಮಂಡಳಿಯೊಳಗೆ ಅಧ್ಯಕ್ಷರ ನೇಮಕಾತಿ ನಡೆಯಲಿದೆ ಎಂದು ತಿಳಿಸಿರುವ ಶಿವಕುಮಾರ್ ಈಗಾಗಲೇ ಈ ಸಂಬಂಧ ಒಂದು ಸುತ್ತಿನ ಮಾತುಕತೆ ನಡೆದಿದೆ. ಪಕ್ಷದ ವರಿಷ್ಠರು ಬೆಂಗಳೂರಿಗೆ ಬಂದು ನಿಗಮಮಂಡಳಿ ನೇಮಕಾತಿಗೆ ಸಂಬಂಧಪಟ್ಟಂತೆ ಅಂತಿಮ ಪಟ್ಟಿ ಸಿದ್ಧತೆಗೊಳಿಸಲಿದ್ದಾರೆ ಎಂದರು.
ಲೋಕೋಪಯೋಗಿ ಸಚಿವ ಹಾಗೂ ಪಕ್ಷದ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ ಅವರೊಂದಿಗೆ ಅವರ ನಿವಾಸದಲ್ಲಿ ನಡೆದ ಮಾತುಕತೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿ, ನಾನು ಪಕ್ಷದ ಅಧ್ಯಕ್ಷನಾಗಿ ಅವರೊಂದಿಗೆ ಮಾತನಾಡಿದ್ದೇನೆ. ಬಹುತೇಕ ನಾಯಕರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದ್ದೇನೆ.
ಅದೇರೀತಿಯಾಗಿ ಸತೀಶ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ನಮ್ಮ ನಿವಾಸದಲ್ಲಿ ಸಭೆ ಮಾಡಲು ಸಾಧ್ಯವಿಲ್ಲ. ಹಾಗಾಗಿ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಕೆಲ ನಾಯಕರು ನಮ್ಮ ಸಂಪರ್ಕದಲ್ಲಿದ್ದು, 15ರಂದು ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.