ಶಿವಮೊಗ್ಗ: ಇತ್ತೀಚೆಗೆ ಶಿವಮೊಗ್ಗದಲ್ಲಿ ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ.ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮೃತ ಚಂದ್ರಶೇಖರ್ ಅವರ ಶಿವಮೊಗ್ಗ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಮುಖ್ಯಮಂತ್ರಿಯವರು ಪಡೆಯಬೇಕು. ಇಲ್ಲವಾದರೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹ ಪಡಿಸಿದರು.
ತಮ್ಮ ಎರಡು ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಒಂದು ವಾರಗಳ ಕಾಲ ಕಾಲಾವಕಾಶ ನೀಡಲಾಗುವುದು. ಬೇಡಿಕೆ ಈಡೇರದಿದ್ದರೆ ಮುಂದಿನ ವಾರದಿಂದ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂಬ ಎಚ್ಚರಿಕೆ ನೀಡಿದರು.
ಕೇವಲ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ನಡೆದಿಲ್ಲ. ಸರ್ಕಾರದ ಬೇರೆ ಇಲಾಖೆಗಳಲ್ಲೂ ಸಾಕಷ್ಟು ಹಗರಣಗಳು ನಡೆದಿವೆ. ಇದರಿಂದ ಬಂದ ಹಣವನ್ನು ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಲಾಗಿದೆ. ಲೋಕಸಭಾ ಚುನಾವಣೆಗೆ ಈ ಹಣವನ್ನು ವರ್ಗಾಯಿಸಲಾಗಿದೆ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.
ಮೃತ ಚಂದ್ರಶೇಖರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದ ವಿಜಯೇಂದ್ರ ಅವರು, ಭೇಟಿಯ ವೇಳೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರ ಬಗ್ಗೆ ಮಾಹಿತಿ ಕಲೆ ಹಾಕಿದ್ದು, ಇದು ಇಲಾಖೆ, ಸಚಿವರು ಹಾಗೂ ಸರ್ಕಾರದ ವೈಫಲ್ಯ. ನಿಮ್ಮ ಕುಟುಂಬದ ಜೊತೆಗೆ ರಾಜ್ಯ ಬಿಜೆಪಿ ಘಟಕ ಇರಲಿದೆ ಎಂದು ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಬಿ.ವೈ.ವಿಜಯೇಂದ್ರಗೆ ಶಿವಮೊಗ್ಗ ಶಾಸಕ ಚನ್ನಬಸಪ್ಪ ಹಾಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಉಪಸ್ಥಿತರಿದ್ದರು.