ದೊಡ್ಡಬಳ್ಳಾಪುರ: ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಲು ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಲಿದೆ. ಜನಸ್ಪಂದನದಲ್ಲಿ ಸ್ವೀಕರಿಸಿದ ದೂರು, ಅಹವಾಲುಗಳನ್ನು ಶೀಘ್ರವಾಗಿ ಸಂಬಂಧಪಟ್ಟ ಇಲಾಖೆಗಳು ಬಗೆಹರಿಸಬೇಕು ಎಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಧೀರಜ್ ಮುನಿರಾಜು ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿಂದು ಎರ್ಪಡಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನರು ಪ್ರತಿ ದಿನ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಜನಸ್ಪಂದನಾ ಕಾರ್ಯಕ್ರಮ ಸಹಕಾರಿಯಾಗಲಿದೆ.
ತಾಲ್ಲೂಕಿನ ರಸ್ತೆ, ಸ್ಮಶಾನ ರಸ್ತೆ, ಅವೈಜ್ಞಾನಿಕ ಚರಂಡಿ ವ್ಯವಸ್ಥೆ, ನಿವೇಶನ ಹಂಚಿಕೆ, ಪೆನ್ಷನ್ ಸಮಸ್ಯೆ, ಆಧಾರ್ ಕೇಂದ್ರ ಮರು ಚಾಲನೆ, ಉಪ ತಹಸೀಲ್ದಾರ್ ಕಛೇರಿ ಕಾರ್ಯನಿರ್ವಹಣೆ ಮುಂತಾದ ವಿವಿಧ ರೀತಿಯ ಸಮಸ್ಯೆ ಮುಂತಾದ (ನ್ಯಾಯಾಲಯ ಪ್ರಕರಣಗಳನ್ನು ಹೊರತು ಪಡಿಸಿ) ಅರ್ಜಿಗಳನ್ನು ಶೀಘ್ರವೇ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಹೇಳಿದರು.
ಸರ್ಕಾರಿ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಬೇಕು. ರೈತರ ಪರವಾಗಿ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕಿದೆ. ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸ್ಮಶಾನ ಜಾಗಗಳ ಗುರುತಿಸುವಿಕೆಗೆ ಕ್ರಮ ವಹಿಸಬೇಕಿದೆ. ಕೆರೆ ಸಂರಕ್ಷಣೆ, ಅಕ್ರಮ ಭೂ ಕಬಳಿಕೆ, ಗೋಮಾಳ ಒತ್ತುವರಿಯಂತಹ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅದೇ ರೀತಿಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಅಧಿಕಾರಿಗಳು ಕ್ರಮವಹಿಸಲು ಹೇಳಿದರು.
ಮುಖ್ಯಮಂತ್ರಿಗಳ ಆಶಯದಂತೆ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರವೇ ಜನರ ಬಳಿ ಬಂದು ಸಮಸ್ಯೆ ಬಗೆಹರಿಸುವ ಕೆಲಸ ಇದಾಗಿದೆ. ಸ್ವೀಕೃತವಾದ ಅರ್ಜಿಗಳನ್ನು ಸಕಾಲದಲ್ಲಿ ಪರಿಹರಿಸಲು ಅಧಿಕಾರಿಗಳು ಕ್ರಮವಹಿಸಬೇಕಿದೆ. ಇದರಿಂದಾಗಿ ಜನರ ಸಮಸ್ಯೆ ಶೀಘ್ರ ಬಗೆಹರೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
*126 ಅರ್ಜಿ ಸ್ವೀಕಾರ*ಪೋಡಿ ಪ್ರಕರಣ, ಜಮೀನು ತಕರಾರು, ಗ್ರಾಮಗಳಿಗೆ ವಿದ್ಯುತ್ ಸಂಪರ್ಕ, ಜಮೀನು ಸರ್ವೆ, ಸ್ಮಶಾನ ಜಾಗ ಹಾಗೂ ರಸ್ತೆ ವ್ಯವಸ್ಥೆ, ಗೋಮಾಳ ಒತ್ತುವರಿ, ಹಕ್ಕು ಪತ್ರ ಹಂಚಿಕೆ, ಕೆರೆ ಕಟ್ಟೆ ಸಂರಕ್ಷಣೆ, ಪಡಿತರ ಚೀಟಿ ಹಂಚಿಕೆ, ನಿವೇಶನ ಹಂಚಿಕೆ, ಚರಂಡಿ ನಿರ್ಮಾಣ, ರಸ್ತೆ ಅಪಘಾತಗಳು, ಮೂಲಭೂತ ಸಮಸ್ಯೆಗಳು, ಸೇರಿದಂತೆ ಒಟ್ಟು 126 ಅಹವಾಲುಗಳನ್ನು ಸಾರ್ವಜನಿಕರಿಂದ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಹೊನ್ನಾವರ ಗ್ರಾಮ ಪಂಚಾಯಿತಿ ಅಧ್ಯಕ್ಷ ತಿರುಮಲಮ್ಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ಡಿವೈಎಸ್ಪಿ ರವಿ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಯ ಮುಖಂಡರು, ಪಂಚಾಯಿತಿ ಅಧಿಕಾರಿಗಳು, ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸಾರ್ವಜನಿಕರು ಉಪಸ್ಥಿತರಿದ್ದರು.