ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 22- ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಪ್ರಿಲ್ 26ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲೆಯಲ್ಲಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾನ ಪೂರ್ವ ಸಿದ್ದತೆಗಳ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಯವರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ 983 ಮತ್ತು ಮೈಸೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿನ 1,017 ಮತಗಟ್ಟೆಗಳು ಸೇರಿದಂತೆ ಒಟ್ಟು 2 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಹೆಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 282, ನಂಜನಗೂಡು 246, ವರುಣ 261 ಹಾಗೂ ಟಿ.ನರಸೀಪುರ 228 ಸೇರಿದಂತೆ ಒಟ್ಟು 1,017 ಮತ್ತು ಹನೂರು ವಿಧಾನಸಭಾ ಕ್ಷೇತ್ರದಲ್ಲಿ 254, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ 241, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 239 ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 249 ಸೇರಿದಂತೆ ಒಟ್ಟು 983 ಮತಗಟ್ಟೆಗಳು ಇವೆ. ಒಟ್ಟಾರೆ ಮತಗಟ್ಟೆಗಳ ಪೈಕಿ 263 ಮತಗಟ್ಟೆಗಳು ನಗರ ಪ್ರದೇಶದಲ್ಲಿ ಹಾಗೂ 1,737 ಮತಗಟ್ಟೆಗಳು ಗ್ರಾಮೀಣ ಪ್ರದೇಶದಲ್ಲಿವೆ ಎಂದರು.
ಜಿಲ್ಲೆಯ 4 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 983 ಮತಗಟ್ಟೆಗಳ ಪೈಕಿ 197 ಮತಗಟ್ಟೆಗಳನ್ನು ಸೂಕ್ಷ್ಮ (ಕ್ರಿಟಿಕಲ್) ಮತಗಟ್ಟೆಗಳಾಗಿ ಗುರುತಿಸಲಾಗಿದ್ದು, ಚುನಾವಣೆಯನ್ನು ಶಾಂತಿಯುತ, ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ ಒಟ್ಟು 1,667 ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.
ಲಿಂಗ ಸಮಾನತೆ ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸಖಿ ಶೀರ್ಷಿಕೆಯಡಿ ವಿಶೇಷ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಮತಗಟ್ಟೆಗಳನ್ನು ವಿಶೇಷವಾಗಿ ಅಲಂಕರಿಸಿ ಮಹಿಳಾ ಮತದಾರರನ್ನು ಮತದಾನಕ್ಕೆ ಪ್ರೇರೇಪಿಸಲು ಹಾಗೂ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಸ್ಥಳಗಳಲ್ಲಿ ಸಖಿ ಸೌರಭ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 4 ಮತಗಟ್ಟೆಗಳಂತೆ ಒಟ್ಟು 16 ಸಖಿ ಸೌರಭ ಮತಗಟ್ಟೆಗಳನ್ನು ತೆರೆಯಲಾಗಿದೆ.
ಬುಡಕಟ್ಟು ಜನರನ್ನು ಮತದಾನಕ್ಕೆ ಪ್ರೇರೇಪಿಸಲು ಆದ್ಯತೆ ನೀಡಲಾಗಿದ್ದು, ಗುಂಡ್ಲುಪೇಟೆ ತಾಲೂಕಿನಲ್ಲಿ 2 ಸಾಂಪ್ರದಾಯಿಕ ಬುಡಕಟ್ಟು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ವಿಶೇಷಚೇತನರಿಗೆ ಅನುಕೂಲವಾಗುವಂತೆ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 1 ರಂತೆ 4 ವಿಶೇಷಚೇತನರ ಮತಗಟ್ಟೆಗಳನ್ನು ತೆರೆಯಲಾಗಿದೆ. ಯುವ ಮತದಾರರನ್ನು ಮತದಾನದೆಡೆ ಸೆಳೆಯಲು ಪ್ರತೀ ವಿಧಾನಸಭಾ ಕ್ಷೇತ್ರಗಳಿಗೆ ತಲಾ 2ರಂತೆ ಒಟ್ಟು 8 ಯುವ ಸೌರಭ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಜಿಲ್ಲೆಯ ಸಾಂಸ್ಕøತಿಕ ಕಲೆಗಳ ಮಹತ್ವ ತಿಳಿಸಲು ಅನುಕೂಲವಾಗುವಂತೆ ಹನೂರು ಹಾಗೂ ಚಾಮರಾಜ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದೊಂದು ಸಾಂಪ್ರದಾಯಿಕ ಮತಗಟ್ಟೆಗಳನ್ನು ತೆರೆಯಲಾಗಿದೆ. ರೈತರ ಮಹತ್ವವನ್ನು ಬಿಂಬಿಸುವ ಅನ್ನದಾತ ಮತಗಟ್ಟೆಗಳನ್ನು ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 2ರಂತೆ ಒಟ್ಟು 8 ಅನ್ನದಾತ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅರಣ್ಯ ಮಹತ್ವ ತಿಳಿಸಲು ಹನೂರು ವಿಧಾನಸಭಾ ಕ್ಷೇತ್ರದಲ್ಲಿ 1, ಕೊಳ್ಳೇಗಾಲ 1, ಚಾಮರಾಜನಗರ 2 ಹಾಗೂ ಗುಂಡ್ಲುಪೇಟೆ 2 ಸೇರಿದಂತೆ ಒಟ್ಟು 6 ಹಸಿರು ಮತಗಟ್ಟೆಗಳನ್ನು ತೆರೆಯಲಾಗಿದೆ ಎಂದರು.
ಮತದಾನದ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಜಿಲ್ಲೆಯಲ್ಲಿ ಚುನಾವಣಾ ಜಾಗೃತಿಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಮತದಾನ ಜಾಗೃತಿ ಕಾರ್ಯಕ್ರಮಗಳ ಕುರಿತು ಸವಿವರವಾಗಿ ವಿವರಿಸಿದ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಭಾರತ ಚುನಾವಣಾ ಆಯೋಗ, ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಏಪ್ರಿಲ್ 26ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲಾಡಳಿತದಿಂದ ಅಗತ್ಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬ ನಾಗರಿಕರು ಮತಗಟ್ಟೆಗೆ ಬಂದು ಮತ ಚಲಾಯಿಸುವಂತೆ ಮನವಿ ಮಾಡಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಇತರರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.