ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಗಳಲ್ಲಿ ವಿಶೇಷಚೇತನರ ಮತದಾನಕ್ಕೆ ಅಗತ್ಯ ಮೂಲ ಸೌಕರ್ಯಗಳನ್ನು ಆದ್ಯತೆ ಮೇರೆಗೆ ಕಲ್ಪಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿಂದು ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ ವಿಶೇಷಚೇತನ ಮತದಾರರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಸಂಬಂಧ ನೋಡಲ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 26 ಸಾವಿರಕ್ಕೂ ಹೆಚ್ಚಿನ ವಿಶೇಷಚೇತನ ಮತದಾರರನ್ನು ಗುರುತಿಸಲಾಗಿದ್ದು, ಮತಗಟ್ಟೆಗಳಲ್ಲಿ ವಿಶೇಷಚೇತನರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಬೇಕಾಗಿದೆ.
ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಕಚೇರಿ ಈ ಬಗ್ಗೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ವಿಶೇಷಚೇತನರಿಗೆ ಮತಗಟ್ಟೆಗಳಲ್ಲಿ ಅವಶ್ಯ ಸೌಲಭ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು ಎಂದರು.ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಯಾವುದೇ ವಿಶೇಷಚೇತನರು ಮತದಾನದಿಂದ ವಂಚಿತ ರಾಗದಂತೆ ನಿಗಾ ವಹಿಸಬೇಕು. ಇದಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿವಾರು ಹಾಗೂ ಪ್ರತಿ ಮತಗಟ್ಟೆವಾರು ಎಷ್ಟು ವಿಶೇಷಚೇತನರಿದ್ದಾರೆ ಎಂಬ ಮಾಹಿತಿ ಸಂಗ್ರಹಿಸುವ ಕಾರ್ಯ ತುರ್ತಾಗಿ ಆಗಬೇಕಾಗಿದೆ.
ಮತದಾನ ದಿನದಂದು ವಿಶೇಷಚೇತನರಿಗೆ ಮತ ಚಲಾಯಿಸಲು ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಮತದಾರರ ಚೀಟಿಯನ್ನು ಕ್ಷೇತ್ರ ಮತಗಟ್ಟೆ ಅಧಿಕಾರಿಗಳ ಮೂಲಕ ವಿತರಿಸಲಾಗಿದೆ ಎಂದು ತಿಳಿಸಿದರು.ವಿಶೇಷಚೇತನರು ಮತದಾನಕ್ಕೆ ಮತಗಟ್ಟೆಗಳಿಗೆ ಆಗಮಿಸಿದಾಗ ಇತರರೊಂದಿಗೆ ಸರತಿ ಸಾಲಿನಲ್ಲಿ ಕಾಯಿಸದೇ ಆದ್ಯತೆ ಮೇರೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಡಬೇಕು. ಮತಗಟ್ಟೆಗಳು ವಿಶೇಷಚೇತನ ಸ್ನೇಹಿಯಾಗಿರಬೇಕು. ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಶೌಚಾಲಯ, ಕುಳಿತುಕೊಳ್ಳಲು ಅಸನಗಳ ವ್ಯವಸ್ಥೆ, ರ್ಯಾಂಪ್ ವ್ಯವಸ್ಥೆ, ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಸಮರ್ಪಕವಾಗಿರಬೇಕು. ಮತದಾನ ಸಮಯದಲ್ಲಿ ವಿಶೇಷಚೇತನರು ಯಾವುದೇ ಆಮಿಷ ಒಳಗಾಗದಂತೆ ತಡೆಯಲು ಸಂಬಂಧಪಟ್ಟ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ವಿಶೇಷ ಗಮನ ಹರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.
ಚಾಮರಾಜನಗರ ಲೋಕಸಭಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಅಂಚೆಪತ್ರ ಮತದಾನದ ಸಲುವಾಗಿ ಒಟ್ಟು 25589 ವಿಶೇಷಚೇತನರನ್ನು ಗುರುತಿಸಿದ್ದು, ಈ ಪೈಕಿ 445 ವಿಶೇಷಚೇತನ ಮತದಾರರು ಮನೆಯಲ್ಲಿ ಮತದಾನ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಉಳಿದವರು ಮತಗಟ್ಟೆಗೆ ಬಂದು ಮತ ಚಲಾಯಿಸಲಿದ್ದಾರೆ. ಈ ಸಂಬಂಧ ಮತದಾರರಿಗೆ ‘ನಮೂನೆ-12ಡಿ’ ಯನ್ನು ವಿತರಿಸಲಾಗಿದೆ. ಒಟ್ಟಾರೆ ಯಾವುದೇ ವಿಶೇಷಚೇತನರು ಕಡ್ಡಾಯವಾಗಿ ಮತದಾನ ಮಾಡಲು ಆಯಾ ತಹಶೀಲ್ದಾರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯನಿರ್ವ ಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಶಿಲ್ಪಾ ನಾಗ್ ಅವರು ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಗೀತಾ ಹುಡೇದ, ಎಂಟು ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುರೇಶ್, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.