ಬೆಂಗಳೂರು: ಈ ಬಾರಿ ನಡೆಯಲಿರುವ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ಧತೆ ನಡೆಸತೊಡಗಿವೆ. ಇಂದು ಕಾಂಗ್ರೆಸ್ ಮತ್ತು ಬಿಜೆಪಿ ವತಿಯಿಂದ ಚುನಾವಣಾ ತಯಾರಿ ಸಭೆಗಳು ನಡೆದಿವೆ.ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯದ ಉಸ್ತುವಾರಿ ಹೊತ್ತಿರುವ ಎಐಸಿಸಿ ಮುಖಂಡರಾದ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖಂಡರ ಸಭೆ ನಡೆದಿದೆ.
ಸಭೆಯಲ್ಲಿ ಸಚಿವ ಜಿಲ್ಲಾಧ್ಯಕ್ಷರು ಸೇರಿದಂತೆ ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದಾರೆ.ಮತ್ತೊಂದೆಡೆ ಬಿಜೆಪಿ ವತಿಯಿಂದ ಲೋಕಸಭೆ ಕ್ಷೇತ್ರವಾರು ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹಣ ಸಭೆ ನಡೆದಿದೆ.
ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಬೆಂಗಳೂರು ಯಲಹಂಕ ಹೊರವಲಯದಲ್ಲಿರುವ ಹೊಟೇಲ್ ರಮಾಡದಲ್ಲಿ ಸಭೆ ನಡೆಯುತ್ತಿದೆ. ಇಂದಿನ ಸಭೆಯಲ್ಲಿ ಸುಮಾರು 13 ಲೋಕಸಭಾ ಕ್ಷೇತ್ರಗಳ ಸಂಬಂಧ ಅಭಿಪ್ರಾಯ ಸಂಗ್ರಹಣೆ ನಡೆಯಲಿದೆ ಎಂದು ಹೇಳಲಾಗಿದೆ.
ಸಭೆಯಲ್ಲಿ ಪಕ್ಷದ ಅನೇಕ ಮುಖಂಡರು ಪಾಲ್ಗೊಂಡಿದ್ದಾರೆ.ಇನ್ನೊಂದೆಡೆ ಜೆಡಿಎಸ್ ಪಕ್ಷವು ಸಹ ರೆಸಾರ್ಟ್ವೊಂದರಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮಾಜಿಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಅವರ ನೇತೃತ್ವದಲ್ಲಿ ಮುಖಂಡರು ಹಾಗೂ ಪ್ರಮುಖರ ಅಭಿಪ್ರಾಯ ಸಂಗ್ರಹಣೆಗಾಗಿ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ವತಿಯಿಂದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಹಾಗೂ ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಅನುಸರಿಸಬೇಕಾದ ತಂತ್ರಗಾರಿಕೆ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.