ಬೆಂಗಳೂರು: ಲೋಕಸಭಾ ಚುನಾವಣೆ ಸಂಬಂಧ ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಮತದಾನದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡಿದೆ.ಗುರುವಾರವಾದ ಇಂದುಮಧ್ಯಾಹ್ನ ಒಂದೂ-ವರೆ ಗಂಟೆಯಿಂದ ರಾಹುಕಾಲ ಆರಂಭವಾಗಲಿದೆ ಎಂಬ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಬೆಳಿಗ್ಗೆ 11 ಗಂಟೆಯೊಳಗೆ ತರಾತುರಿಯಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದ್ದು, ಕೆಲ ಕಡೆ ಕಂಡುಬಂದಿತು.
ಇಂದು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ತಮ್ಮ ತಮ್ಮ ಪಕ್ಷಗಳು ನೀಡಿದ್ದ ಬಿ.ಫಾರಂ ಸಲ್ಲಿಸುವುದರೊಂದಿಗೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.ಮಂಡ್ಯ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಬಯಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಮಾಜಿ ಪ್ರಧಾನಿ ದೇವೇಗೌಡರ ಅಳಿಯ ಡಾ. ಸಿ.ಎನ್. ಮಂಜುನಾಥ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿಯಾಗಿ ರಾಮನಗರದಲ್ಲಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರಿಕೆ ಸಲ್ಲಿಕೆ ಮಾಡಿದ್ದರೆ, ತುಮಕೂರಿನಲ್ಲಿ ಮಾಜಿ ಸಂಸದ ಎಸ್.ಪಿ. ಮುದ್ದಹನುಮೆಗೌಡ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷರಾಮಯ್ಯ, ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ನಾಮಪತ್ರ ಸಲ್ಲಿಕೆ ಮಾಡಿದ್ದರೆ, ಕೋಲಾರದಲ್ಲಿ ಕೆ.ವಿ. ಗೌತಮ್ ನಾಮಪತ್ರ ಸಲ್ಲಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾಜಿ ಉಪಮುಖ್ಯಮಂತ್ರಿ ಗೋವಿಂದಕಾರಜೋಳ ನಾಮಪತ್ರ ಸಲ್ಲಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಹುಜನ ಭಾರತ್ ಪಕ್ಷದ ಡಾ.ಸಿ.ಎನ್. ಮಂಜುನಾಥ್ ಎಂಬುವರು ನಾಮಪತ್ರ ಸಲ್ಲಿಕೆ ಮಾಡಿರವುದು ವಿಶೇಷವಾಗಿದೆ.ಬೆಂಗಳೂರು ದಕ್ಷಿಣಾ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಬಿಜೆಪಿಯ ತೇಜಸ್ವಿ ಸೂರ್ಯ ಮುಖಂಡರು ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.