ನವದೆಹಲಿ: ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್ ಗಂಭೀರ್ ಸಕ್ರಿಯ ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಶನಿವಾರ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಜಕೀಯ ಕರ್ತವ್ಯಗಳಿಂದ ಬಿಡುಗಡೆ ಮಾಡುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಳಿ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
2019 ರ ಲೋಕಸಭಾ ಚುನಾವಣೆ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕಿದ್ದ ಅವರು, ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿದ್ದರು.ರಾಜಕೀಯ ಚಟುವಟಿಕೆಗಳಿಂದ ಮುಕ್ತಿ ನೀಡುವಂತೆ ಜೆಪಿ ನಡ್ಡಾ ಅವರಿಗೆ ಮನವಿ ಮಾಡುತ್ತಿದ್ದೇನೆ. ಇದರಿಂದಾಗಿ ನಾನು ಮುಂಬರುವ ದಿನಗಳಲ್ಲಿ ಕ್ರಿಕೆಟ್ ಬಗ್ಗೆ ಹೆಚ್ಚು ಗಮನಹರಿಸಬಹುದಾಗಿದೆ.
ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮತ್ತು ಗೌರವಾನ್ವಿತ ಗೃಹ ಸಚಿವ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಜೈ ಹಿಂದ್! ಎಂದು ಗಂಭೀರ್ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.