ಬೆಂಗಳೂರು: ವಿಜಯನಗರದ ಪಾದರಾಯಣಪುರ ನೂತನ ರೈಲ್ವೆ ಮೇಲ್ಸೆತುವೆ ನಿರ್ಮಾಣವು ಕ್ಷೇತ್ರದ ಜನರಿಗೆ ಅತ್ಯಂತ ಅನುಕೂಲಕರವಾಗಿದ್ದು, ಈ ಮಹತ್ತರ ಕಾರ್ಯವನ್ನು ಪೂರ್ಣಗೊಳಿಸಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಬಿಜೆಪಿ ಮುಖಂಡ ಹೆಚ್. ರವೀಂದ್ರ ಅವರು ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್. ರವೀಂದ್ರ ಅವರು, ಕೇಂದ್ರ ಸಚಿವರಾದ ವಿ. ಸೋಮಣ್ಣ ಅವರು ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ ನಾಲ್ಕು ರೈಲುಗಳ ನಿಲುಗಡೆಗೆ ಅವಕಾಶ ಕಲ್ಪಿಸಿಕೊಡುವ ಮೂಲಕ ವಿಜಯನಗರ ಹಾಗೂ ಗೋವಿಂದರಾಜನಗರ ಸುತ್ತಮುತ್ತಲಿನ ಸಾರ್ವಜನಿಕರಿಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು. ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತರಾಗಿರುವ ಸೋಮಣ್ಣ ಅವರು, ಪಾದರಾಯಣಪುರ ರೈಲ್ವೆ ಸೇತುವೆ ಯೋಜನೆಯನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಶಸ್ವಿಯಾಗಿ ಸಾಕಾರಗೊಳಿಸಿದ್ದಾರೆ. ಅಭಿವೃದ್ಧಿ ಎಂಬುದು ಭಾರತೀಯ ಜನತಾ ಪಕ್ಷದಿಂದ ಮಾತ್ರ ಸಾಧ್ಯ ಎಂಬುದಕ್ಕೆ ಈ ಯೋಜನೆಗಳೇ ಸಾಕ್ಷಿ ಎಂದು ಅವರು ಅಭಿಪ್ರಾಯಪಟ್ಟರು.
ಬಿಜೆಪಿ ಪಕ್ಷವು ಸದಾ ಜನರ ಸೇವೆಯಲ್ಲಿ ತೊಡಗಿದ್ದು, ರಾಜ್ಯದ ಅಭಿವೃದ್ಧಿಗೆ ಬದ್ಧವಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಿದ್ದು, ಜನತೆ ಮತ್ತೆ ಭಾರತೀಯ ಜನತಾ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಮಹಾನಗರ ಪಾಲಿಕೆ ಚುನಾವಣೆಗೆ ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮುಖಂಡ ನವೀನ್ ರವೀಂದ್ರ ಮಂಡಲ ಅಧ್ಯಕ್ಷರಾದ ವಿ. ರಾಮಾಂಜಿನಿ, ಪ್ರಧಾನ ಕಾರ್ಯದರ್ಶಿ ಎ.ಜಿ. ಆನಂದ್ ಗೌಡ, ಪ್ರಮುಖರಾದ ಸಂತೋಷ್, ರವಿ, ನರಸಿಂಹ ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ವಿಜಯನಗರದ ಪಾದರಾಯಣಪುರ ನೂತನ ರೈಲ್ವೆ ಮೇಲ್ಸೆತುವೆ ನಿರ್ಮಾಣ: ಸಚಿವ ವಿ. ಸೋಮಣ್ಣ ಕಾರ್ಯಕ್ಕೆ ಹೆಚ್. ರವೀಂದ್ರ ಪ್ರಶಂಸೆ



