ಮಂಡ್ಯ: ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಒಕ್ಕಲಿಗ ಅಸ್ತ್ರಕ್ಕೆ ದಳಪತಿಗಳು ಪ್ರತ್ಯಸ್ತ್ರ ಸಿದ್ಧಪಡಿಸಿದ್ದು, ಮಂಡ್ಯದಲ್ಲಿ ದೋಸ್ತಿಗಳ ಬೃಹತ್ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ. ಒಂದೇ ವೇದಿಕೆಯಲ್ಲಿ ಒಕ್ಕಲಿಗ, ಲಿಂಗಾಯಿತ, ಮೈಸೂರು ಅರಸರ ಸಮಾಗಮವಾಗುತ್ತಿದೆ. ಮಂಡ್ಯ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯ ನಗರದ ವಿವಿಧ ದೇಗುಲಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಅಂಬೇಡ್ಕರ್, ಕಾವೇರಿ, ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಜೆಡಿಎಸ್-ಬಿಜೆಪಿ ಮೈತ್ರಿ ಸಮಾವೇಶ ನಡೆಯುತ್ತಿದೆ. ಮಂಡ್ಯ ವಿವಿ ಆವರಣದಲ್ಲಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಹಲವು ಸಮುದಾಯದ ಮುಖಂಡರು ಭಾಗಿಯಾಗಿದ್ದಾರೆ.
ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮೈಸೂರು ಅಭ್ಯರ್ಥಿ ಯದುವೀರ್, ನಿಖಿಲ್ ಕುಮಾರಸ್ವಾಮಿ, ಜಿಲ್ಲೆಯ ಮಾಜಿ ಸಚಿವರು, ಶಾಸಕರು, ಸ್ಥಳೀಯ ಮುಖಂಡರು ಸಮಾವೇಶದಲ್ಲಿ ಭಾಗಿಯಾಗುತ್ತಿದ್ದಾರೆ.