ಬೆಂಗಳೂರು: ಬಿಲ್ಡರ್ಗಳಿಗೆ ಸೇರಿದ ಸುಮಾರು 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿರುವ ಆದಾಯ ತೆರಿಗೆ(ಐಟಿ)ಇಲಾಖೆ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದ ಬಿಲ್ಡರ್ಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಶೋಧ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ಕೈಗೊಂಡಿದ್ದಾರೆ.ಕೆ.ಆರ್. ಪುರಂ ಸಮೀಪದ ಕೊಡಿಗೇಹಳ್ಳಿಯ ನಂಜುಂಡೇಶ್ವರ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಹಲವು ಪ್ರಮುಖ ಬಿಲ್ಡರ್ಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಕಡತಗಳ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
ತೆರಿಗೆ ವಂಚನೆ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ರಾಜಕೀಯ ನಾಯಕರಿಗೆ ಫಂಡಿಂಗ್ ಮಾಡುತ್ತಿರುವ ಕುರಿತು ಐಟಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅಕ್ರಮವಾಗಿ ಹಣದ ಸಾಗಣೆ ಕುರಿತು ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.