ಬೆಂಗಳೂರು: ಬಿಜೆಪಿ ತನ್ನ ದ್ವೇಷದ ಮೂಲಕ ಕರ್ನಾಟಕದ ಮಣ್ಣಿನ ಮಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬವನ್ನು ಕೊಲ್ಲುವ ಸಂಚು ರೂಪಿಸಿ ಪಾಪದ ಕೃತ್ಯ ಎಸಗಿದೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ಯೆಗೆ ಸಂಚು ನಡೆದಿದ್ದರೂ ಮೋದಿ ಹಾಗೂ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ತೋರುತ್ತಿರುವುದರಿಂದ ಕಂಗೆಟ್ಟಿರುವ ಬಿಜೆಪಿ ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ ಸೇರಿದಂತೆ ಇಡೀ ಕುಟುಂಬವನ್ನೇ ಹತ್ಯೆ ಮಾಡುವ ಸಂಚು ರೂಪಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೋದಿ ಹಾಗೂ ಬೊಮ್ಮಾಯಿ ಅವರ ಆತ್ಮೀಯ ನೀಲಿ ಕಂಗಳ ಹುಡುಗ ಹಾಗೂ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಅವರ ಆಡಿಯೋದಲ್ಲಿ ಈ ಸಂಚು ಸ್ಪಷ್ಟವಾಗಿದೆ.ರಾಜ್ಯ ಹಾಗೂ ರಾಷ್ಟ್ರ ಮಟ್ಟದ ನಾಯಕತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ಕನ್ನಡ ನಾಡಿನ ಮಗ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ದ್ವೇಷ ಕಾರುತ್ತಲೆ ಬಂದಿದೆ. ಖರ್ಗೆ ಅವರು ದಲಿತ ಹಾಗೂ ಕಾರ್ಮಿಕ ಕುಟುಂಬದಲ್ಲಿ ಜನಿಸಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸ್ಥಾನದಿಂದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದವರೆಗೆ ಬೆಳೆದು ಬಂದಿರುವುದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಖರ್ಗೆ ಅವರ ವಿರುದ್ಧ ಸಂಚು ರೂಪಿಸುತ್ತಿದೆ.
ಫೆ.27, 2023ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಛತ್ರಿ ಕೆಳಗೆ ನಿಂತಿಲ್ಲ ಎಂದು ಹೇಳುವ ಮೂಲಕ ಲೇವಡಿ ಮಾಡಿದ್ದರು. ಬಿಜೆಪಿಯ ದ್ವೇಷಪೂರಿತ ಹೇಳಿಕೆ ಅಲ್ಲಿಗೆ ನಿಲ್ಲಲಿಲ್ಲ. ಮೇ 02, 2023ರಂದು ಬಿಜೆಪಿ ರಾಜಸ್ಥಾನದ ಶಾಸಕ ಹಾಗೂ ಪ್ರಧಾನ ಕಾರ್ಯದರ್ಶಿ ಮದನ್ ದಿಲಾವರ್ ಖರ್ಗೆ ಅವರಿಗೆ 80 ವರ್ಷ ವಯಸ್ಸಾಗಿದ್ದು, ದೇವರು ಅವರನ್ನು ಯಾವಾಗ ಬೇಕಾದರೂ ಕರೆಸಿಕೊಳ್ಳಬಹುದು ಎಂದು ಖರ್ಗೆ ಅವರ ಸಾವನ್ನು ಬಯಸಿದ್ದರು. ಈಗ ಬಿಜೆಪಿ ನಾಯಕರು ಬಹಿರಂಗವಾಗಿ ಖರ್ಗೆ ಹಾಗೂ ಅವರ ಕುಟುಂಬದ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಹೇಳಿದ್ದಾರೆ.
ಬಸವಣ್ಣನ ನಾಡು ಸಾಮರಸ್ಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡ ನಾಡಿನ ಈ ಪರಂಪರೆಯ ಮೇಲೆ ಈಗ ದಾಳಿಯಾಗುತ್ತಿದೆ. ಇದು ಕೇವಲ ಖರ್ಗೆ ಅವರ ಮೇಲೆ ದಾಳಿಯ ಸಂಚು ಮಾತ್ರವಲ್ಲ, ಕನ್ನಡಿಗರ ಮೇಲೆ ದಾಳಿ ಮಾಡುವ ಸಂಚು. ಇಷ್ಟೆಲ್ಲಾ ಆದರೂ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗ ಮೌನಕ್ಕೆ ಶರಣಾಗಿದೆ. ಆದರೆ ರಾಜ್ಯದ 6.50 ಕೋಟಿ ಕನ್ನಡಿಗರು ಈ ಚುನಾವಣೆಯಲ್ಲಿ ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದಿದ್ದಾರೆ.
Leave a Review