ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಗುರುವಾರ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಿದ್ದು, ನಿರೀಕ್ಷೆಯಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ, ಆರು ಮಂದಿ ಸಚಿವರ ಕುಟುಂಬಸ್ಥರು, ದಾಖಲೆಯ ಐವರು ಮಹಿಳೆಯರು (ಮೊದಲ ಪಟ್ಟಿಯ ಗೀತಾ ಶಿವರಾಜಕುಮಾರ್ ಸೇರಿ ಒಟ್ಟು ಆರು ಮಂದಿ ಮಹಿಳೆಯರು) ಸೇರಿದಂತೆ 17 ಮಂದಿಗೆ ಟಿಕೆಟ್ ಘೋಷಿಸಲಾಗಿದೆ.
ಕಾಂಗ್ರೆಸ್ ಪಕ್ಷವು ಈಗಾಗಲೇ ಏಳು ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಪ್ರಕಟಿಸಿದೆ. ಇದೀಗ 17 ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸುವ ಮೂಲಕ ರಾಜ್ಯದಲ್ಲಿರುವ 28 ಲೋಕಸಭಾ ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸಿದಂತಾಗಿದೆ. ತೀವ್ರ ಪೈಪೋಟಿಯಿರುವ ನಾಲ್ಕು ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸುವುದು ಬಾಕಿಯಿದೆ.
ಈ ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಅಂತಿಮಗೊಳಿಸಲು ಶುಕ್ರವಾರ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿಗೆ ಬರಲಿದ್ದು, ಈ ಸಭೆಯಲ್ಲಿ ಬಾಕಿ ಇರುವ ಚಿಕ್ಕಬಳ್ಳಾಪುರ, ಬಳ್ಳಾರಿ, ಚಾಮರಾಜನಗರ ಮತ್ತು ಕೋಲಾರ ಕ್ಷೇತ್ರಗಳ ಟಿಕೆಟ್ ಕೂಡ ಅಂತಿಮಗೊಂಡು ಒಂದೆರಡು ದಿನಗಳಲ್ಲಿ ಪ್ರಕಟಗೊಳ್ಳಲಿದೆ.