ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.10 ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 7.30ರ ಗಂಟೆಯವರೆಗೂ ನಡೆಯಿತು.
ಅಮಾವಾಸ್ಯೆ, ಹಾಗೂ ಸರ್ಕಾರಿ ರಜೆ ದಿನಗಳು , ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,10,78,014ರೂ. ಸಂಗ್ರಹವಾಗಿದೆ. ಚಿನ್ನ ಮತ್ತು ಬೆಳ್ಳಿ ಮೌಲ್ಯಮಾಪಕರಿಗೆ ಅನಾರೋಗ್ಯದ ಹಿನ್ನೆಲೆ ಚಿನ್ನ ಮತ್ತು ಬೆಳ್ಳಿಯನ್ನು ಶೇಖರಿಸಿ ಇಡಲಾಗಿದೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಲೆಕ್ಕ ಅಧೀಕ್ಷಕ ನಾಗೇಶ್, ಎಸ್ಡಿಎ ಮಹದೇವಸ್ವಾಮಿ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.