ಚಿಕ್ಕಬಳ್ಳಾಪುರ: ಸರ್ಕಾರ ಜಾರಿಗೆ ತಂದಿರುವ ಮಹತ್ವಕಾಂಕ್ಷಿ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಲು, ಜಿಲ್ಲೆಯ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಮನೆ ಮನೆ ಸಮೀಕ್ಷೆ ಮಾಡಿಸಿ ಮಾಹಿತಿ ಪಡೆದು ನಂತರ ಸೂಕ್ತ ಕ್ರಮವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಎನ್.ಮಂಜುಳಾ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಾವೀಗ ಆರ್ಥಿಕ ವರ್ಷದ ಅಂತಿಮ ಹಂತದಲ್ಲಿದ್ದು,ಈ ಅವಧಿಯಲ್ಲಿ ಹೆಚ್ಚು ಜಾಗೃತರಾಗಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು.ವಿವಿಧ ಇಲಾಖೆಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಿಗೆ ಕಾರ್ಯಕ್ರಮಗಳಿಗೆ ಸರ್ಕಾರಿದಿಂದ ಬಿಡುಗಡೆಯಾಗುವ ಅನುದಾನವನ್ನು ಪ್ರಸ್ತುತ ಆರ್ಥಿಕ ವರ್ಷದಲ್ಲಿ ತೀರ್ಣಗೊಳಿಸಿ ಸಮರ್ಪಕವಾಗಿ ಯೋಜನೆಗಳನ್ನು ಜಾರಿ ಗೊಳಿಸಬೇಕು.
ಇಲ್ಲವಾದಲ್ಲಿ ಸಂಬಂಧಪಟ್ಟವರೇ ಹೊಣೆಯಾಗಬೇಕಾಗುತ್ತದೆ ಎಂದು ತಿಳಿಸಿದರು.ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ
ಕುಡಿಯುವ ನೀರಿನ ಸಮಸ್ಯೆ ಎದುರಾಗಬಹು ದಾಗಿದ್ದು, ಈ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಉಪಕಾರ್ಯ ದರ್ಶಿ ಡಾ. ಭಾಸ್ಕರ್, ಉಪವಿಭಾಗಧಿಕಾರಿ ಅಶ್ವಿನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿದೆಡೆ ಭೇಟಿ ಮತ್ತು ಪರಿಶೀಲನೆ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗುಡಿಬಂಡೆ ತಾಲ್ಲೂಕಿನ ವರ್ಲಕೊಂಡ ಗ್ರಾಮದ ಅಂಗನವಾಡಿ ಕೇಂದ್ರ, ಕೂಸಿನ ಮನೆ ಮತ್ತು ಗ್ರಂಥಾಲಯ ಕೇಂದ್ರಕ್ಕೆ ಭೇಟಿ ಅಲ್ಲಿನ ಸೌಲಭ್ಯ, ಸೇವೆಗಳ ಕುರಿತು ಪರಿಶೀಲನೆ ಮಾಡಿದರು.
ನಂತರ ಬಾಗೇಪಲ್ಲಿ ತಾಲ್ಲೂಕಿನ ಪರಗೋಡು ಗ್ರಾಮ ಪಂಚಾಯಿತಿಯ ಪೂಲವಾರಿಪಲ್ಲಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬಾಗೇಪಲ್ಲಿ ಪಟ್ಟಣದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.