ನವದೆಹಲಿ: ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿ ಕುಸ್ತಿಯನ್ನು ತೊರೆಯುವ ಹೇಳಿಕೆಯನ್ನು ನೀಡಿದ್ದಾರೆ.
ಗುರುವಾರ ನಡೆದ ಕುಸ್ತಿ ಫೆಡರೇಷನ್ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಮತ್ತು ಆಪ್ತರಿಗೆ ಅವಕಾಶ ನೀಡುವುದಿಲ್ಲ ಎಂದು ಕ್ರೀಡಾ ಸಚಿವಾಲಯವು ಕುಸ್ತಿಪಟುಗಳಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಉತ್ತರ ಪ್ರದೇಶ ಕುಸ್ತಿ ಫೆಡರೇಶನ್ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಂಜಯ್ ಸಿಂಗ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬಲಗೈ ಬಂಟರಾಗಿದ್ದರು ಎಂದು ಎಲ್ಲರಿಗೂ ಗೊತ್ತಿರುವ ವಿಚಾರ ಹೀಗಿದ್ದರೂ ಅವರನ್ನು ಚುನಾವಣೆಗೆ ನಿಲ್ಲಿಸಿದೆ ಎಂದು ಆರೋಪಿಸಿದರು.
ಈ ಕಾರಣಕ್ಕೆ ನಾನು ಕುಸ್ತಿಯನ್ನು ತ್ಯಜಿಸುವುದಾಗಿ ಟೋಕಿಯೊ ಒಲಿಂಪಿಕ್ಸ್ನಲ್ಲಿ ಪದಕ ವಿಜೇತೆ ಬಜರಂಗ್ ಪುನಿಯಾ ಅವರೊಂದಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಾಕ್ಷಿ ಮಲಿಕ್ ಭಾವನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದಾರೆ.