ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ, ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಸ್ಪಂದನಾಶೀಲರಾಗಿ ಕಾನೂನು ರೀತ್ಯ ಕೆಲಸ ಮಾಡಿದರೆ ಯಶಸ್ಸು ಸಿಗಲಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ಅವರು ತಿಳಿಸಿದರು.ಶುಕ್ರವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ನಡೆದ “ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ”ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನದಿಂದ ನಾವು ಮುಕ್ತವಾಗಿ ಸ್ವಾತಂತ್ರ್ಯದ ಜೀವನವನ್ನು ಸಾಗಿಸುತ್ತಿದ್ದೇವೆ, “ಮುಕ್ತವಾದ ಅವಕಾಶಗಳು ಎಲ್ಲರಿಗೂ ಸಿಗಬೇಕು ಎಂಬುದು ಬಲಿದಾನಿಗಳ ಆಶಯವಾಗಿತ್ತು”. ಆ ನಿಟ್ಟಿನಲ್ಲಿ ಪಂಚಾಯತ್ ರಾಜ್ ಕಾಯ್ದೆಯಡಿ ಅನುಷ್ಠಾನವಾಗುತ್ತಿರುವ ಕೆಲಸಗಳು ಮೌಲ್ಯಯುತವಾಗಿವೆ. ಗ್ರಾಮ ಪಂಚಾಯಿತಿಗಳು ಸ್ಥಳೀಯ ಸರ್ಕಾರವಾಗಿ ಕಾರ್ಯನಿರ್ವಹಿಸಿ ತನ್ನ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳು ಹಾಗೂ ಇನ್ನಿತರ ಸಾರ್ವಜನಿಕ ಸಂಸ್ಥೆಗಳ ಮೇಲುಸ್ತುವಾರಿಯನ್ನು ಪರಿಣಾಮಕಾರಿಯಾಗಿ ನಡೆಸುತ್ತಿವೆ. ಜಿಲ್ಲೆಯಲ್ಲಿ ಎಲ್ಲ ಹಂತದ ಜನ ಪ್ರತಿನಿಧಿಗಳ ಸಹಕಾರವನ್ನು ಪಡೆದು ಕೆಲಸ ನಿರ್ವಹಿಸುತ್ತಿರುವುದರಿಂದ ತೆರಿಗೆ ವಸೂಲಿಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು ಶೇ. 100 ರಷ್ಟು ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ 2ನೇ ಸ್ಥಾನ ಗಳಿಸಿದೆ. ಹಾಗೆಯೇ ಗುಣಮಟ್ಟದ ಆಡಳಿತ ಸೇವೆಗಳನ್ನು ನೀಡುವ ಮೂಲಕ ಪಂಚ ತಂತ್ರ (ಪಿ-2) -2 ವ್ಯವಸ್ಥೆಯಲ್ಲಿ ರಾಜ್ಯದಲ್ಲಿ ಜಿಲ್ಲೆ 4ನೇ ಸ್ಥಾನ ಗಳಿಸಲು ಸಾಧ್ಯವಾಗಿದೆ. ಅಲ್ಲದೆ ವಿಶೇಷ ಕಂದಾಯ ಗ್ರಾಮ ಅಭಿಯಾನ 2.ಔ ಕಾರ್ಯಕ್ರಮದಡಿ ಐತಿಹಾಸಿ ಸಾಧೆನಗೆ ಮುಂದಾಗಿದೆ. ಈ ಅಭಿಯಾನದಡಿ ರಾಮನಗರ ಜಿಲ್ಲೆ 30,000 ಹಕ್ಕುಪತ್ರಗಳನ್ನು ವಿತರಿಸಲು ಕ್ರಮವಹಿಸಿ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯು 1,04,000 ಹಕ್ಕು ಪತ್ರಗಳನ್ನು ಮುಂದಿನ 10 ತಿಂಗಳಲ್ಲಿ ವಿತರಿಸಲು ಕಾರ್ಯೋನ್ಮೂಖವಾಗಿದೆ. ಈ ಎಲ್ಲಾ ಕಾರ್ಯಗಳಿಗಾಗಿ ಶ್ರಮಿಸುತ್ತಿರುವ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯಡಿ ಕೆಲಸ ನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಕರವಸೂಲಿಗಾರರು, ಜಲಗಾರರು, ಗ್ರಂಥಪಾಲಕರು, ಡಿ.ದರ್ಜೆ ನೌಕರರೆಲ್ಲರೂ ಅಭಿನಂದನಾರ್ಹರು ಎಂದು ತಿಳಿಸಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವೈ.ನವೀನ್ ಭಟ್ ರವರು ಮಾತನಾಡಿ ಕಳೆದ ಸಾಲಿಗಿಂತ ಈ ಬಾರಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿAದ ರೂ. 9 ಕೋಟಿ ಹೆಚ್ಚುವರಿ ತೆರಿಗೆ ಸಂಗ್ರಹವಾಗಿ ಗ್ರಾಮ ಪಂಚಾಯ್ತಿಗಳ ಸಬಲೀಕರಣಕ್ಕೆ ಸ್ಥಳೀಯವಾಗಿಯೇ ನೆರವಾಗಿದೆ. ಈ ಹಣ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೀದಿ ದೀಪ, ಕುಡಿಯುವ ನೀರು ಪೂರೈಕೆ, ಚರಂಡಿ ಸ್ವಚ್ಚತೆ ಸೇರಿದಂತೆ ಇತರ ಕಾರ್ಯಗಳಿಗೆ ಬಳಕೆಯಾಗಿ ಅನುದಾನದ ಕೊರತೆಯನ್ನು ನೀಗಿಸುವಲ್ಲಿ ಯಶಸ್ವಿಯಾಗಿದೆ. ಈ ಎಲ್ಲಾ ಶ್ರೇಯಕ್ಕೆ ಕಾರಣೀಭೂತರಾದ ಗ್ರಾಮಪಂಚಾಯ್ತಿ ವ್ಯಾಪ್ತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಕರವಸೂಲಿಗಾರರು, ಜಲಗಾರರು, ಗ್ರಂಥಪಾಲಕರ ಸೇವೆಯು ಸ್ಮರಣೀಯವಾದದ್ದು. ಈ ಕಾರ್ಯವನ್ನು ಮುಂದಿನ ದಿನಗಳಲ್ಲೂ ಹೀಗೆ ಮುಂದುವರೆಸುವಂತೆ ಹಾಗೂ ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ತೋರಿದ ಗ್ರಾಮ ಪಂಚಾಯಿತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಕರವಸೂಲಿಗಾರರು, ಜಲಗಾರರು, ಗ್ರಂಥಪಾಲಕರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ, ಸಹಾಯಕ ಕಾರ್ಯದರ್ಶಿ ಮುನಿರಾಜು, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳಾದ ಆನಂದ್, ಹೊನ್ನಯ್ಯ, ಮಂಜುನಾಥ್, ಮುಖ್ಯ ಲೆಕ್ಕಾಧಿಕಾರಿ ರಘು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಕರವಸೂಲಿಗಾರರು, ಜಲಗಾರರು, ಗ್ರಂಥಪಾಲಕರು ಹಾಜರಿದ್ದರು.
ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ, ಉತ್ತಮ ಸಾಧನೆ ತೋರಿದ ಗ್ರಾಮ ಪಂಚಾಯ್ತಿಗಳ ಅಧಿಕಾರಿ ಸಿಬ್ಬಂದಿಗೆ ಸನ್ಮಾನ



