ಬೆಂಗಳೂರು: ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಎದುರಾಗಿದೆ. ಕಾಂಗ್ರೆಸ್ ಪಕ್ಷದಲ್ಲಿಯೇ 3ಕ್ಕೂ ಹೆಚ್ಚು ಮಂದಿ ಪೈಪೋಟಿ ನಡೆಸಿದ್ದು, ಈ ಮಧ್ಯೆ ಬಿಜೆಪಿಯಿಂದ ಹೊರಗುಳಿದಿರುವ ಶಾಸಕರು ಸಹ ಆಕಾಂಕ್ಷಿಯಾಗಿದಾರೆ. ಮಾಜಿ ಸಚಿವರಾದ ಶಿವಾನಂದ ಪಾಟೀಲ್, ಕೆ.ಎನ್.ರಾಜಣ್ಣ, ವಿಧಾನಪರಿಷತ್ ಸದಸ್ಯ ಎಸ್. ರವಿ, ಶಿವರಾಮ್ ಹೆಬ್ಬಾರ್ ಅವರು ಸಹ ಆಕಾಂಕ್ಷಿಗಳಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸರ್ವ ಸಮ್ಮತ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ಒಲವು ಹೊಂದಿದ್ದಾರೆ. ನಾಳೆ ಬ್ಯಾಂಕ್ ನಿರ್ದೇಶಕರ ಸಭೆ ಮುಖ್ಯಮಂತ್ರಿಯವರ ಸಮ್ಮುಖದಲ್ಲೇ ನಡೆಯಲಿದೆ. 10ನೇ ತಾರೀಖು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಅಧ್ಯಕ್ಷ ಸ್ಥಾನ ಪಡೆಯಲೇ ಬೇಕು ಎಂದು ಆಕಾಂಕ್ಷಿಯಾಗಿರುವ ಮಾಜಿ ಸಚಿವ ರಾಜಣ್ಣ ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅದಕ್ಕೆ ಮುಖ್ಯಮಂತ್ರಿಯವರು ಇದರಲ್ಲಿ ತಮ್ಮದೇನು ಪಾತ್ರವಿಲ್ಲ. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಅವರು ಅಪೆಕ್ಸ್ ಬ್ಯಾಂಕ್ ಸ್ಥಾನ ಕೊಡಿಸುವುದು ನಿಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಈ ಮಧ್ಯೆ ದೆಹಲಿಗೆ ಭೇಟಿ ನೀಡಿರುವ ರಾಜಣ್ಣ ನಿನ್ನೆ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಶಿವರಾಮ್ ಹೆಬ್ಬಾರ್ ಪರ ಒಲವು ಹೊಂದಿದ್ದು, ಶಿವರಾಮ್ ಹೆಬ್ಬಾರ್ ಅವರಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.
ಈಗಾಗಲೇ ಮೂರು ಭಾರಿ ಹೆಬ್ಬಾರ್ ಅವರು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿದ್ದು, ಈ ಬಾರಿ ಅವರಿಗೆ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹಪಡಿಸಿದ್ದಾರೆ.
ಪ್ರತಿಭಾರಿಯೂ ಕೊಟ್ಟವರಿಗೆ ಕೊಡುವುದು ಬೇಡ ಎಂದು ನಾಳೆ ಸಿಎಂ ಸಮ್ಮುಖದಲ್ಲಿ ನಡೆಯುವ ಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಅವರು ತಿಳಿಸಿದ್ದಾರೆ.
ವಿಧಾನಪರಿಷತ್ ಸದಸ್ಯ ಹಾಗೂ ತಮ್ಮ ಸಂಬAಧಿಯೂ ಆಗಿರುವ ಎಸ್. ರವಿ ಅವರಿಗೆ ಅಧ್ಯಕ್ಷ ಸ್ಥಾನ ಕಲ್ಪಿಸಲು ಮುಖ್ಯಮಂತ್ರಿ ಅವರು ಒಲವು ಹೊಂದಿದ್ದಾರೆ ಎಂದು ಮಾತುಗಳು ಕೇಳಿಬರುತ್ತಿವೆ. ಒಟ್ಟಾರೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ಚುನಾವಣೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.