ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಸೇರಿದಂತೆ ಪ್ರಮುಖ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಗೆ ಮುನ್ನ ಪೊಲೀಸರು ಕೈಗೊಂಡಿರುವ ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳು ಮತ್ತಷ್ಟು ತೀವ್ರಗೊಂಡಿವೆ.ಪಕ್ಷವು ಎಕ್ಸ್ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಸಿಜೆಪಿ ನಾಯಕರು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಐಜಿಐ) ವಿಮಾನದಲ್ಲಿ ಬಂದಿಳಿದ ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ.ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಮುನ್ನ, ಯೂಟ್ಯೂಬರ್ ಧ್ರುವ್ ರಾಠಿಯನ್ನು ದೆಹಲಿ ಪೊಲೀಸರು ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಜೆಪಿ, ಧ್ರುವ್ ರಾಠಿಯನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.