ಬಾಗೇಪಲ್ಲಿ: ಸೆ.14ರಂದು ನಡೆಯಲಿರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಹಾಗೂ ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಆಚರಿಸುವ ನಿಟ್ಟಿನಲ್ಲಿ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಗಣೇಶೋತ್ಸವ ಆಯೋಜಕರು, ಮುಖಂಡರು ಹಾಗೂ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ವಿಧಿಸಿರುವ ನಿಯಮಗಳು ಮತ್ತು ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪೊಲೀಸ್ ಇನ್ಸ್ಪೆಕ್ಟರ್ ಅಜಯ್ ಸಾರಥಿ ಅವರು ವಿವರವಾಗಿ ಮಾಹಿತಿ ನೀಡಿದರು.ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಂಬAಧಪಟ್ಟ ಗ್ರಾಮ ಪಂಚಾಯಿತಿ ಅಥವಾ ಪುರಸಭೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಖಾಸಗಿ ಜಾಗದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಸ್ಥಳದ ಮಾಲೀಕರಿಂದ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಎಂದು ಅವರು ಸ್ಪಷ್ಟಪಡಿಸಿದರು.ಧ್ವನಿವರ್ಧಕ ಬಳಕೆಗೆ ಪ್ರತ್ಯೇಕ ಅನುಮತಿ: ಗಣೇಶೋತ್ಸವದ ಸಂದರ್ಭದಲ್ಲಿ ಮೈಕ್ ಬಳಸಲು ಮಾತ್ರ ಅವಕಾಶವಿದ್ದು, ಏ2 ಚಲನ್ ಭರ್ತಿ ಮಾಡಿಕೊಂಡು ಪೊಲೀಸ್ ಇಲಾಖೆಯಿಂದ ಪ್ರತ್ಯೇಕ ಅನುಮತಿ ಪಡೆಯಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪಿಸಿರುವ ಸ್ಥಳದಲ್ಲಿ ಸಾಂಸ್ಕöÈತಿಕ, ಸಂಗೀತ, ನೃತ್ಯ ಅಥವಾ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವುದಾದರೆ ಮುಂಚಿತವಾಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅಗತ್ಯ ಪೊಲೀಸ್ ಬಂದೋಬಸ್ತ್ ಪಡೆಯಬೇಕು ಎಂದು ಸೂಚಿಸಿದರು.ಡಿಜೆ ಬಳಕೆ ಮಾಡಿದರೆ ಕ್ರಮ: ಗಣೇಶೋತ್ಸವದಲ್ಲಿ ಡಿಜೆ ಸೌಂಡ್ ಸಿಸ್ಟಮ್‌ಗಳನ್ನು ಬಳಸಲು ಯಾವುದೇ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿ ಡಿಜೆ ಬಳಸಿದಲ್ಲಿ ಸೌಂಡ್ ಸಿಸ್ಟಮ್‌ಗಳನ್ನು ವಶಕ್ಕೆ ಪಡೆದು, ಸಂಬಂಧಪಟ್ಟವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಇನ್ಸ್ಪೆಕ್ಟರ್ ಅಜಯ್ ಸಾರಥಿ ಎಚ್ಚರಿಕೆ ನೀಡಿದರು.ಅದೇ ರೀತಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹೆಚ್ಚಿನ ಶಬ್ದ ಉಂಟುಮಾಡುವ ಪಟಾಕಿಗಳನ್ನು ಸಿಡಿಸದಂತೆ ಹಾಗೂ ಹಬ್ಬದ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಸಂಘಟಕರು ಮತ್ತು ಸಾರ್ವಜನಿಕರಿಗೆ ಕರೆ ನೀಡಿದರು.
ಜೂಜಾಟ, ಬೆಟ್ಟಿಂಗ್‌ಗೆ ಕಡಿವಾಣ: ಗಣೇಶೋತ್ಸವದ ನೆಪದಲ್ಲಿ ಇಸ್ಪೀಟ್, ಜೂಜಾಟ, ಬೆಟ್ಟಿಂಗ್ ಸೇರಿದಂತೆ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಇಂತಹ ಚಟುವಟಿಕೆಗಳು ಕಂಡುಬಂದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.ಹಬ್ಬದ ಸಂದರ್ಭದಲ್ಲಿ ಸರ್ಕಾರ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ಹೊರಡಿಸುವ ಆದೇಶ, ನಿರ್ದೇಶನ ಮತ್ತು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹಬ್ಬದ ಆಚರಣೆಯ ನೆಪದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದAತೆ ಸಂಘಟಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಯಿತು.ಸಂಜೆ 6 ಗಂಟೆಯೊಳಗೆ ಗಣೇಶ ವಿಸರ್ಜನೆ: ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಸಂಘಟಕರು ಸ್ಥಳದಲ್ಲೇ ಹಾಜರಿದ್ದು, ನುರಿತ ಈಜುಗಾರರನ್ನು ಮಾತ್ರ ನೀರಿಗೆ ಇಳಿಸುವಂತೆ ನೋಡಿಕೊಳ್ಳಬೇಕು. ವಿಸರ್ಜನೆ ಪೂರ್ಣಗೊಳ್ಳುವವರೆಗೆ ಸಂಘಟಕರೇ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು. ವಿಸರ್ಜನಾ ಕಾರ್ಯಕ್ರಮವನ್ನು ಸಂಜೆ 6 ಗಂಟೆಯೊಳಗೆ ಮುಕ್ತಾಯಗೊಳಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.ನಿಯಮ ಪಾಲಿಸಿ, ಶಾಂತಿಯುತವಾಗಿ ಹಬ್ಬ ಆಚರಿಸಿ: ಗಣೇಶೋತ್ಸವವು ಎಲ್ಲರ ಹಬ್ಬವಾಗಿದ್ದು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬ ಆಚರಿಸುವಂತೆ ಇನ್ಸ್ಪೆಕ್ಟರ್ ಅಜಯ್ ಸಾರಥಿ ಮನವಿ ಮಾಡಿದರು. ಪೊಲೀಸ್ ಇಲಾಖೆ ಸೂಚಿಸಿರುವ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಸಂಬಂಧಪಟ್ಟ ಆಯೋಜಕರನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.ಸಭೆಯಲ್ಲಿ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ಅನ್ಸರ್ ಸೇರಿದಂತೆ ಪೊಲೀಸ್ ಸಿಬ್ಬಂದಿ, ವಿವಿಧ ಮುಖಂಡರು ಹಾಗೂ ಗಣೇಶೋತ್ಸವ ಆಯೋಜಕರು ಉಪಸ್ಥಿತರಿದ್ದರು.