ಬೆಂಗಳೂರು: 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮಪಂಚಾಯತಿಗಳಿಗೆ ಬರಬೇಕಾದ 2186.20 ಕೋಟಿ ರೂ. ಅನುದಾನ ತಡೆಹಿಡಿದಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ತೀರ್ಮಾನಿಸಲಾಗಿದೆ.ಇಂದು ತಮ್ಮ ಕಚೇರಿಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಅಧಿಕಾರಿಗಳೊಂದಿಗೆ ಈ ಸಂಬಂಧ ಸಭೆ ನಡೆಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಿದ್ದ 2186.20 ಕೋಟಿ ರೂ. ಬಿಡುಗಡೆ ಮಾಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆ ಯಿಂದ ಬರಪರಿಸ್ಥಿತಿ ತಲೆದೋರಿದ್ದು, 710 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. 149 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 561 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆ ಒಡೆಯದೆ ರೈತರು ಕಂಗಾಲಾಗಿರುವ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಈ ರೀತಿ ನ್ಯಾಯಯುತ ಹಂಚಿಕೆಯನ್ನೇ ಬಿಡುಗಡೆ ಮಾಡದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಕಾನೂನು ಅಂಶಗಳ ಬಗ್ಗೆ ಚರ್ಚಿಸಿದರು.