ಗಾಜಾ: ದಕ್ಷಿಣ ಗಾಜಾದ ಖಾನ್ ಯೂನಿಸ್ನಲ್ಲಿರುವ ನಾಸೆರ್ ವೈದ್ಯಕೀಯ ಸಂಕೀರ್ಣದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಅವರ ಸಹಾಯಕರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದ್ದು, ವೈದ್ಯಕೀಯ ಸೌಲಭ್ಯಗಳನ್ನು ರಕ್ಷಿಸುವ ಅಂತರರಾಷ್ಟ್ರೀಯ ಕಾನೂನುಗಳ ಸ್ಪಷ್ಟ ಉಲ್ಲಂಘನೆ ಇದಾಗಿದೆ ಎಂದು ಖಂಡಿಸಿದೆ.ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಈ ಸಾವುನೋವುಗಳನ್ನು ದೃಢಪಡಿಸಿದ್ದು, ದಾಳಿಯಿಂದ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಭಾರಿ ಹಾನಿಯಾಗಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಗಳು ಮತ್ತು ತೀವ್ರ ನಿಗಾ ಘಟಕಗಳ ಮೇಲೂ ಈ ದಾಳಿ ಪರಿಣಾಮ ಬೀರಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ 2023 ರಿಂದ ಗಾಜಾದಲ್ಲಿನ ಆರೋಗ್ಯ ಸೇವೆಗಳ ಮೇಲೆ ನಡೆದ 1,056 ದಾಳಿಗಳನ್ನು ವಿಶ್ವ ಆರೋಗ್ಯ ಸಂಸ್ಥೆ ದಾಖಲಿಸಿದ್ದು, ಇದರಿಂದಾಗಿ 1,010 ಮಂದಿ ಸಾವನ್ನಪ್ಪಿದ್ದಾರೆ ಮತ್ತು 1,725 ಮಂದಿ ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.