ಬೆಂಗಳೂರು: ಹೋಟೆಲ್ ಮತ್ತು ಬೇಕರಿಗಳಲ್ಲಿ ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಪದೇ ಪದೇ ಮರುಬಳಕೆ ಮಾಡುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಉಂಟಾಗುತ್ತಿರುವ ಗಂಭೀರ ದುಷ್ಪರಿಣಾಮಗಳನ್ನು ತಡೆಯಲು ಆರೋಗ್ಯ ಇಲಾಖೆ ಇದೀಗ ದಿಟ್ಟ ಹೆಜ್ಜೆ ಇಟ್ಟಿದೆ. ಇನ್ಮುಂದೆ ಹೋಟೆಲ್ಗಳಲ್ಲಿ ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಅಕ್ರಮಕ್ಕೆ ಕಡಿವಾಣ ಹಾಕಲು ಇಲಾಖೆಯು ಶೀಘ್ರದಲ್ಲೇ ವಿಶೇಷ ಮೊಬೈಲ್ ಆ್ಯಪ್ ಒಂದನ್ನು ಬಿಡುಗಡೆ ಮಾಡಲಿದ್ದು, ಮುಂದಿನ ಮೂರು ತಿಂಗಳಲ್ಲಿ ಇದು ಜಾರಿಗೆ ಬರಲಿದೆ.