ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲು ಇನ್ನು ಒಂದೂವರೆ ವರ್ಷಕ್ಕೂ ಹೆಚ್ಚು ಕಾಲಾವಧಿ ಇದೆ. ಆದರೆ ರಾಜ್ಯದಲ್ಲಿ ಇರುವ ಮೂರು ರಾಜಕೀಯ ಪಕ್ಷಗಳು ಈಗಿನಿಂದಲೇ ಚುನಾವಣೆಗೆ ಸಜ್ಜಾಗುತ್ತಿವೆ. ಕಾರಣ ಈ ವರ್ಷಾಂತ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಾದ ನಗರಸಭೆ, ಪುರಸಭೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಹಾಗೂ ಗ್ರಾಮ ಪಂಚಾಯತಿ ಚುನಾವಣೆಗಳು. ಹಾಗಾಗಿ ಮುಂದಿನ ವಿಧಾನಸಭಾ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗಮನದಲ್ಲಿರಿಸಿಕೊಂಡು ತಮ್ಮ ತಮ್ಮ ಪಕ್ಷಗಳ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ತಯಾರಿ ನಡೆಸಿವೆ.
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವೂ ಸಹ ಇಂದಿನಿಂದ ಭಾರತ್ ಜೋಡೋ ಹೆಸರಿನಲ್ಲಿ ಪಾದಯಾತ್ರೆ ನಡೆಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಈಸೂರಿನಿಂದ ಶಿವಮೊಗ್ಗದವರೆಗೂ 10 ಕಿ.ಮೀ. ಉದ್ದದ ಪಾದಯಾತ್ರೆ ನಡೆಸಲಿದೆ.