ಬೆಂಗಳೂರು: ಆಶಾ ಕಾರ್ಯಕರ್ತೆಯರು ಮತ್ತೆ ಸರ್ಕಾರದ ವಿರುದ್ಧ ಸಮರ ಸಾರಿದ್ದು, ಫ್ರೀಡಂಪಾರ್ಕ್ನಲ್ಲಿ ನಡೆಸುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸರ್ಕಾರದಿಂದ ಗುಡ್ ನ್ಯೂಸ್ ಸಿಗುವ ನಿರೀಕ್ಷೆಯಲ್ಲಿ ಆಶಾ ಕಾರ್ಯಕರ್ತೆಯರಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯತ್ತ ಆಶಾ ಕಾರ್ಯಕರ್ತೆಯರ ಚಿತ್ತ ನೆಟ್ಟಿದೆ.
ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ 3ನೇ ದಿನಕ್ಕೆ ಕಾಲಿಟ್ಟಿದೆ. ಮಾಸಿಕ 15,000 ಗೌರವಧನ, 5 ಲಕ್ಷ ನಿವೃತ್ತಿ ಇಡಿಗಂಟು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ರಾಜ್ಯಾದ್ಯಂತ ಸಾವಿರಾರು ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಲಿಖಿತ ಭರವಸೆ ನೀಡುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುತ್ತಿರುವ ಆಶಾ ಕಾರ್ಯ
ಕರ್ತೆಯರ ಸಂಖ್ಯೆ ಹೆಚ್ಚಾಗುತ್ತಿರು ವುದರಿಂದ ಬೆಂಗಳೂರಿನ ಫ್ರೀಡಂಪಾರ್ಕ್ ಆವರಣದಲ್ಲಿ ಜಾಗ ಸಾಲದಂತಾಗಿದೆ. ಇದರಿಂದಾಗಿ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್ ಪಕ್ಕದ ಕಾಳಿದಾಸ ರಸ್ತೆ ಮತ್ತು ಮುಂಭಾಗದ ಶೇಷಾದ್ರಿ ರಸ್ತೆ ಮೇಲೆಯೇ ಕುಳಿತು ಪ್ರತಿಭಟನೆ ಮುಂದುವರಿಸಿದ್ದಾರೆ. ಅಲ್ಲದೆ ರಾತ್ರಿ ಕೊರೆವ ಚಳಿಯನ್ನೂ ಲೆಕ್ಕಿಸದೇ ಕಂಬಳಿ ಹೊದ್ದು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಕೊರೆವ ಚಳಿಯಲ್ಲೂ ಬೀದಿಯಲ್ಲಿ ಪುಟಾಣಿ ಮಕ್ಕಳನ್ನು ಕಟ್ಟಿಕೊಂಡು ಪ್ರತಿಭಟಿಸುತ್ತಿದ್ದಾರೆ.ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಮುಂದುವರಿದಿದೆ. ಇತ್ತ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆ ಬಗ್ಗೆ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಮುಖ್ಯ ಬೇಡಿಕೆಯಾದ 15,000 ಮಾಸಿಕ ವೇತನ ನಿಗದಿಪಡಿಸುವ ಬಗ್ಗೆ ಇಂದಿನ ಸಂಪುಟ ಸಭೆಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ನಿರ್ದೇಶಕರಾದ ರಜನಿಯವರು ತಿಳಿಸಿದ್ದಾರೆ ಎನ್ನಲಾಗಿದೆ. ಸದ್ಯ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುವುದಾಗಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಘೋಷಿಸಿದೆ.