ನವದೆಹಲಿ: ಬೆಂಗಳೂರಿನ ನೈಸ್ ರಸ್ತೆ ಯೋಜನೆ ಸಂಬಂಧ ರಾಜ್ಯ ಹೈಕೋರ್ಟ್ ನೀಡಿದ್ದ ತೀರ್ಪಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಈ ವಿವಾದ ಸಂಬಂಧ ನೈಸ್ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ನೇತೃತ್ವದ ಪೀಠದಲ್ಲಿಂದು ವಿಚಾರಣೆ ನಡೆದು ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆ ನೀಡಲು ನಿರಾಕರಿಸಲಾಗಿದೆ.
ವಿವಾದಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರವೂ ಅರ್ಜಿಯನ್ನು ಸಲ್ಲಿಸಿದೆ. ಎಲ್ಲಾ ಅರ್ಜಿಯನ್ನು ಒಟ್ಟಾಗಿ ಸೇರಿಸಿ ವಿಚಾರಣೆ ನಡೆಸುವುದಾಗಿ ನ್ಯಾಯದೀಶರು ತಿಳಿಸಿದ್ದಾರೆ.
ಈಗಾಗಲೇ ಕಳೆದ 23 ವರ್ಷಗಳಿಂದ ಇದರ ಬಗ್ಗೆ ಚರ್ಚೆ ನಡೆಯುತ್ತಿದೆ. ಸುಮಾರು 11 ಸಾವಿರ ಎಕರೆ ಭೂಮಿಯನ್ನು ಯೋಜನೆಗೆ ಬಳಸಿಕೊಳ್ಳಲಾಗಿದೆ.
ನೈಸ್ ಯೋಜನೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆಯ ಅಗತ್ಯವಿದೆ ಎಂದು ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಹೈಕೋರ್ಟ್ನ ಈ ನಿರ್ಣಯವು ಜಮೀನು ಕಳೆದುಕೊಂಡಿದ್ದ ರೈತರಿಗೆ ದೊಡ್ಡ ಮಟ್ಟದ ನಿರಾಳತೆ ಹಾಗೂ ಜಯ ತಂದುಕೊಟ್ಟಿತ್ತು. ಆದರೆ ಹೈಕೋರ್ಟ್ ನೀಡಿದ್ದ ತನಿಖೆಯ ಆದೇಶವನ್ನು ಪ್ರಶ್ನಿಸಿ ನೈಸ್ ಸಂಸ್ಥೆಯು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.
ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿಚಾರಣೆ ಪೂರ್ಣಗೊಳ್ಳುವವರೆಗೆ ಹೈಕೋರ್ಟ್ ಆದೇಶಕ್ಕೆ ಯಾವುದೇ ರೀತಿಯ ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಹೈಕೋರ್ಟ್ ನಿರ್ದೇಶನದಂತೆ ತನಿಖಾ ಪ್ರಕ್ರಿಯೆಗೆ ತಡೆ ನೀಡಲು ನಿರಾಕರಿಸಿದ ಸರ್ವೋಚ್ಚ ನ್ಯಾಯಾಲಯವು, ಈ ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿದೆ. ಸುಪ್ರೀಂ ಕೋರ್ಟ್ನ ಈ ನಿರ್ಧಾರದಿಂದ ನೈಸ್ ಸಂಸ್ಥೆಗೆ ಹಿನ್ನಡೆಯಾಗಿದ್ದು, ಸಂತ್ರಸ್ತ ರೈತರ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಂತಾಗಿದೆ.