ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಬಯಸಿ ಪ್ರಮುಖ ಪಕ್ಷಗಳ ಘಟನಾನುಘಟಿ ನಾಯಕರು ಇಂದು ತಮ್ಮ ಉಮೇಧುವಾರಿಕೆ ಸಲ್ಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಪಕ್ಷಗಳ ಪ್ರಮುಖರು ಇಂದು ತಮ್ಮ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚೆನ್ನಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿ ನಾಮಪತ್ರ ಸಲ್ಲಿಕೆಗೂ ಮುನ್ನ ತಮ್ಮ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಲು ತಯಾರಿ ನಡೆಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಕೆಂಕೇರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಲು ತೆರಳಿದರು.
ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮುನ್ನ ಬಿಜೆಪಿ ಅಭ್ಯರ್ಥಿಯಾಗಿರುವ ಆರ್ ಅಶೋಕ ಅವರು ಶ್ರೀ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು. ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮುಂಚೆ ಅಲ್ಲಿನ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ನವರು ಕ್ಷೇತ್ರದ ಗಣೇಶ ದೇವಸ್ಥಾನ, ಅಂಬಾಭವಾನಿ ಹಾಗೂ ಶ್ರೀ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಕುರುಬರಹಳ್ಳಿ ಡಾ. ರಾಜಕುಮಾರ್ ಪತ್ಥಳಿಯಿಂದ ನಾಗಪುರದಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ ಬಂಗಾರಪ್ಪ ನಾಮಪತ್ರ ಸಲ್ಲಿಕೆಗೂ ಮುನ್ನ ರಂಗನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದಿಂದ ತಾಲೂಕು ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದು, ನಾಮಪತ್ರ ಸಲ್ಲಿಸಿದ್ದಾರೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡ ಭಾಗಿಯಾಗಿದ್ದವು.
ವರುಣಾ ಕ್ಷೇತ್ರದಿಂದ ವಸತಿ ಸಚಿವ ವಿ. ಸೋಮಣ್ಣ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪಾಲ್ಗೊಂಡು ರೋಡ್ ಶೋ ನಡೆಸಿದರು. ಇದಕ್ಕೂ ಮುನ್ನ ಸೋಮಣ್ಣ ಅವರು ಮೈಸೂರಿನ ಕೋಟೆ ಆಂಜನೇಯ, ಗಣಪತಿ, ಚಾಮುಂಡೇಶ್ವರಿ ಸೇರಿದಂತೆ ವಿವಿಧ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ಶ್ರೀ ಜಾಲಾರಿ ನರಸಿಂಹ ಸ್ವಾಮಿ ದೇವಾಲಯ ಸೇರಿದಂತೆ ಹಲವು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆಗೂ ಮುನ್ನ ಪದ್ಮನಾಭನಗರಕ್ಕೆ ತೆರಳಿ ತಮ್ಮ ತಾತ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಂದ ಬಿ. ಫಾರಂ ಪಡೆದು ಆಶೀರ್ವಾದ ಪಡೆದುಕೊಂಡರು.
ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಕೇಶವಮೂರ್ತಿರವರು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕಾಂಗ್ರೆಸ್ ಕಾರ್ಯಕರ್ತರ ಜೊತೆಯಲ್ಲಿ ನಾಗಪುರ ವಾರ್ಡ್ ನಲ್ಲಿರುವ ಬಿಬಿಎಂಪಿ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
Leave a Review