ದೇವನಹಳ್ಳಿ: ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯವಿದೆ. ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ದುಡಿಮೆಗೆ ಕಳುಹಿಸದೆ, ಉತ್ತಮ ಶಿಕ್ಷಣ ಪಡೆಯಲು ಕಳುಹಿಸಬೇಕು ಎಂದು ದೇವನಹಳ್ಳಿಯ 5 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪಾ. ಎನ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಇಲಾಖೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ದೇವನಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೊಮ್ಮವಾರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಇಂದು ನಡೆದ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ-2024” ರ ಪ್ರಯುಕ್ತ ‘ಕಾನೂನು ಅರಿವು ನೆರವು ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಂವಿಧಾನದಲ್ಲಿ ಮಕ್ಕಳಿಗಾಗಿ ಇರುವ ಕಾಯ್ದೆಗಳು, ಹಕ್ಕುಗಳ ಕುರಿತು ಮಾಹಿತಿ ನೀಡಿದರು. ಮಕ್ಕಳು ಶಿಕ್ಷಣ ಪಡೆಯುವಾಗ ಅಲಕ್ಷ್ಯ ಮಾಡದೇ, ಶ್ರದ್ಧೆಯಿಂದ ಕಲಿತರೇ ಮಾತ್ರವೇ ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಿದೆ ಎಂದರು. ಇದಲ್ಲದೆ ಮಕ್ಕಳನ್ನು ಅಪಹರಣ ಮಾಡಿ ಭಿಕ್ಷಾಟನೆ, ಇತರೆ ಚಟುವಟಿಕೆಗಳಿಗೆ ಹಾಗೂ ಅಂಗಡಿಗಳಲ್ಲಿ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದರೆ ಇಂತಹ ಘಟನೆಗಳನ್ನು ಸಾರ್ವಜನಿಕರು ಗಮನಿಸಿದ್ದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿ ಮಾಹಿತಿ ನೀಡಿ ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರಾಮು ಮಲ್ಲಯ್ಯ ಅವರು ಮಾತನಾಡಿ, ಮಕ್ಕಳನ್ನು ಚಿಕ್ಕವಯಸ್ಸಿಗೆ ಕೆಲಸಕ್ಕೆ ಹಾಕಿದರೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೆಳವಣಿಗೆ ಕುಂಠಿತವಾಗುತ್ತದೆ. ಪೋಷಕರು ಮಕ್ಕಳನ್ನು ವಯೋಸಹಜವಾಗಿ ಆಟವಾಡಲು ಶಿಕ್ಷಣ ಪಡೆಯಲು ಸಹಕರಿಸಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಬಾಲಕಾರ್ಮಿಕ ಇಲಾಖೆಯೂ ಅನೇಕ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಈ ಇಲಾಖೆ ಜತೆಗೆ ಎಲ್ಲ ಇಲಾಖೆಗಳು ಬಾಲ ಕಾರ್ಮಿಕ ಪದ್ಧತಿ ತಡೆಯಲು ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಕಾಲೇಜು ಆವರಣದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವ ವಾಹನಕ್ಕೆ ನ್ಯಾಯಮೂರ್ತಿ ಬಿರಾದಾರ ದೇವಿಂದ್ರಪ್ಪಾ.ಎನ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸಂಗಪ್ಪ ಅವರು ಪ್ರತಿಯೊಬ್ಬ ಪಾಲಕರು ತಮ್ಮ ಮಕ್ಕಳನ್ನು ಚಿಕ್ಕ ವಯಸ್ಸಿನಲ್ಲಿ ಕೆಲಸಕ್ಕೆ ಕಳುಹಿಸದೇ, ಶಿಕ್ಷಣವನ್ನು ಕೊಡಿಸಲು ಶಾಲೆಗಳಿಗೆ ಕಳುಹಿಸುವ ಮೂಲಕ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಸಹಕರಿಸಬೇಕು.
ಮಕ್ಕಳು ಸಹ ಶಾಲೆ ಬಿಟ್ಟು, ದುಡಿಮೆಗೆ ಹೋಗಬಾರದು. ಒಳ್ಳೆಯ ರೀತಿಯಲ್ಲಿ ವಿದ್ಯಾಭ್ಯಾಸ ಮಾಡುವ ಮೂಲಕ ಉನ್ನತ ಮಟ್ಟದ ಸಾಧಕರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.ಕಾರ್ಯಕ್ರಮದ ವೇದಿಕೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಬಗ್ಗೆ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.ಈ ವೇಳೆ ದೇವನಹಳ್ಳಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರತಾಪ್ ಕುಮಾರ ಜಿ ಅವರು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕುರಿತು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾನಿರ್ದೇಶಕರಾದ ಸುಬ್ಬರಾವ್.ಎಸ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನೀತಾ ಲಕ್ಷ್ಮೀ, ಶಾಲೆಯ ಪ್ರಾಂಶುಪಾಲರಾದ ರೇಖಾ, ಜಿಲ್ಲೆಯ ನಾಲ್ಕು ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.