ನೆಲಮಂಗಲ: ಕರ್ತವ್ಯದ ವೇಳೆಯೇ ತುಮಕೂರು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದರಬೆಟ್ಟದಲ್ಲಿ ಪಾರ್ಟಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಂಡಿದೆ.ಪಂಚಾಯತ್ ರಾಜ್ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರ ಸೂಚನೆ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಯ 10(ಡಿ) ಅಡಿಯಲ್ಲಿ ಅಮಾನತು ಆದೇಶ ಹೊರಡಿಸಿದ್ದಾರೆ.ಕರ್ತವ್ಯದ ವೇಳೆಯಲ್ಲಿ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಸೇವೆಗೆ ಲಭ್ಯರಿರಬೇಕಾದ ಸಂದರ್ಭದಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಪಾರ್ಟಿ ನಡೆಸಿರುವುದು ಸರ್ಕಾರಿ ನೌಕರರ ನಡತೆ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಲಾಗಿದೆ. ಸರ್ಕಾರಿ ಸೇವೆಯ ಶಿಸ್ತು, ಕರ್ತವ್ಯನಿಷ್ಠೆ ಹಾಗೂ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುವ ರೀತಿಯ ವರ್ತನೆ ನಡೆಸಿರುವ ಹಿನ್ನೆಲೆಯಲ್ಲಿ ಇಲಾಖೆಯು ತಕ್ಷಣದ ಕ್ರಮಕ್ಕೆ ಮುಂದಾಗಿದೆ.ಅಮಾನತುಗೊಂಡ ಅಧಿಕಾರಿಗಳು: ಶಿವಗಂಗೆ ಗ್ರಾಮ ಪಂಚಾಯಿತಿಯ ಗಿರೀಶ್, ಅಗಳಕುಪ್ಪೆ ಗ್ರಾಮ ಪಂಚಾಯಿತಿಯ ಹರೀಶ್, ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ ಪ್ರಶಾಂತ್, ಮಣ್ಣೆ ಗ್ರಾಮ ಪಂಚಾಯಿತಿಯ ಚಿರಂಜೀವಿ, ಸೋಂಪುರ ಗ್ರಾಮ ಪಂಚಾಯಿತಿಯ ರವಿಶಂಕರ್ ಹಾಗೂ ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ದಿನೇಶ್ ಅಮಾನತುಗೊಂಡಿದ್ದಾರೆ.ಇತ್ತೀಚೆಗೆ ಸಿದ್ದರಬೆಟ್ಟದಲ್ಲಿ ಈ ಅಧಿಕಾರಿಗಳು ಕರ್ತವ್ಯದ ವೇಳೆಯೇ ಪಾರ್ಟಿ ನಡೆಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಸಾರ್ವಜನಿಕರು ಸರ್ಕಾರಿ ಅಧಿಕಾರಿಗಳ ನಿರ್ಲಕ್ಯ ಮತ್ತು ಬೇಜವಾಬ್ದಾರಿತನದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.ಸಾರ್ವಜನಿಕರ ಆಕ್ರೋಶ ಮತ್ತು ಮಾಧ್ಯಮಗಳಲ್ಲಿ ವ್ಯಾಪಕ ವರದಿಗಳ ಬೆನ್ನಲ್ಲೇ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಲಾಖಾ ಮಟ್ಟದಲ್ಲಿ ತನಿಖೆಗೆ ಆದೇಶ ನೀಡಿತ್ತು. ಪ್ರಾಥಮಿಕ ಪರಿಶೀಲನೆಯಲ್ಲಿ ಕರ್ತವ್ಯಲೋಪ ಹಾಗೂ ಸರ್ಕಾರಿ ಸೇವಾ ನಡತೆ ನಿಯಮ ಉಲ್ಲಂಘನೆಯ ಅಂಶಗಳು ಕಂಡುಬಂದ ಹಿನ್ನೆಲೆಯಲ್ಲಿ ಆರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿ ಶಿಸ್ತು, ಪಾರದರ್ಶಕತೆ ಮತ್ತು ಕರ್ತವ್ಯನಿಷ್ಠೆಯನ್ನು ಪಾಲಿಸಬೇಕೆಂಬ ಸಂದೇಶವನ್ನು ಈ ಕ್ರಮದ ಮೂಲಕ ಸರ್ಕಾರ ರವಾನಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆ ಮುಂದುವರಿದಿದ್ದು, ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.



